ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ 80 ಪ್ರಕರಣಗಳ ಪೈಕಿ 63 ಪ್ರಕರಣಗಳಿಗೆ ಒಂದೇ ದಿನದಲ್ಲಿ ಪರಿಹಾರ ಕಂಡುಕೊಳ್ಳಲಾಯಿತು.
ವಿವಿಧ ಇಲಾಖೆಗಳ ವ್ಯಾಪ್ತಿಗೆ ಬರುವ ಹಾಗೂ ಶೀಘ್ರವಾಗಿ ಬಗೆಹರಿಸಲು ಸಾಧ್ಯವಿರುವ ಸುಮಾರು 80 ಪ್ರಕರಣಗಳನ್ನು ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾಗಿತ್ತು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆ ನಡೆಸಿ ಪ್ರಕರಣಗಳ ಕುರಿತು ಕಾನೂನುಬದ್ಧ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿದರು.
ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ
ಬೆಳಗ್ಗೆಯಿಂದ ಸುಮಾರು 12 ಗಂಟೆಗಳ ಕಾಲ ನಡೆದ ಸಭೆಯಲ್ಲಿ 63 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ದೂರುದಾರರಿಗೆ ಸೂಕ್ತ ಪರಿಹಾರ ಹಾಗೂ ಮುಂದಿನ ಕಾನೂನು ಕ್ರಮಗಳ ಕುರಿತು ಮಾರ್ಗದರ್ಶನ ನೀಡಲಾಯಿತು. ಈ ಪ್ರಕ್ರಿಯೆಯಿಂದಾಗಿ ಕೆಲವು ಅಧಿಕಾರಿಗಳ ವಿರುದ್ಧ ಬಾಕಿ ಇದ್ದ ತನಿಖೆ ಹಾಗೂ ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅವರ ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ಇದ್ದ ತಡೆಗಳು ತೆರವುಗೊಂಡಿವೆ ಎಂದು ತಿಳಿಸಲಾಗಿದೆ.
ಒಂದೇ ದಿನದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಇಂತಹ ವಿಶೇಷ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಪ್ರತಿ ತಾಲೂಕು ಮಟ್ಟದಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ, ಬಾಕಿ ಪ್ರಕರಣಗಳಿಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿ ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಸೂಚಿಸಿದರು.




