ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು.
“ವಿದ್ಯಾರ್ಥಿಗಳಿಗೆ ವಸತಿ ನಿಲಯದ ತೊಂದರೆಯಾಗಬಾರದು. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದಷ್ಠಿಯಿಂದ ಅವರಿಗೆ ಸುಸಜ್ಜಿತ ವಸತಿನಿಲಯ ಒದಗಿಸುವುದು ಸೇರಿದಂತೆ ವಸತಿನಿಲಯದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್” ಹೇಳಿದರು.
“ಈ ವಸತಿನಿಲಯದ ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷಗಳು ಕಳೆದಿದ್ದರೂ ಕೂಡಾ ಸೂಕ್ತ ರಸ್ತೆ ಸೌಲಭ್ಯ ಇಲ್ಲದ ಕಾರಣ ಇದು ವಿದ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಾಗಿರಲಿಲ್ಲ. ಈ ಬಗ್ಗೆ ಅರಿತು ವಿಶೇಷ ಮುತುವರ್ಜಿ ವಹಿಸಿ ಶಾಸಕರ ನಿಧಿಯಿಂದ ಈ ಕಟ್ಟಡಕ್ಕೆ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಿರುವುದು ಮಾತ್ರವಲ್ಲದೆ ವಿದ್ಯುತ್ ವ್ಯವಸ್ಥೆ ಮತ್ತು ಕಟ್ಟಡಕ್ಕೆ ಸೂಕ್ತ ಗೇಟ್ ಸೌಲಭ್ಯ ಒದಗಿಸಲಾಗಿದೆ” ಎಂದು ಹೇಳಿದರು.
“ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ರಾಜ್ಯದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದ್ದು, ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಯಾವುದೇ ಹೆಚ್ಚಿನ ಸೌಲಭ್ಯದ ಕುರಿತು ಬೇಡಿಕೆ ಸಲ್ಲಿಸಿದ್ದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿತದೃಷ್ಠಿಯಿಂದ ಅದನ್ನು ಪೂರ್ಣಗೊಳಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವುದರ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಬೇಕು” ಎಂದು ಹಿತ ನುಡಿದರು.
ಈ ಸುದ್ದಿ ಓದಿದ್ದೀರಾ? ಕುಮಟಾ | ಮಾವಿನಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ತಾ.ಪಂ. ಕಾರ್ಯನಿರ್ವಹಣಾ ಅಧಿಕಾರಿ ವೀರನಗೌಡ ಪಾಟೀಲ್, ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ ಗಡ್ಡಿಗೌಡರ ಸೇರಿದಂತೆ ಇತರರು ಇದ್ದರು.