ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿ ಅಸಾಮಿಯೊಬ್ಬನನ್ನು ಆರು ತಿಂಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಕಾರವಾರದ ಕಳಸವಾಡ ನಿವಾಸಿ ಸೂರ್ಯಕಾಂತ್ ಅಲಿಯಾಸ್ ಜಾಕ್ (27) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ. ಈತನ ಮೇಲೆ ಕಾರವಾರ ನಗರ, ಗ್ರಾಮೀಣ ಹಾಗೂ ನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ ಹಾಗೂ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೇರಿದಂತೆ ಒಟ್ಟು 7ಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿದ್ದವು.
ಗಡಿಪಾರು ಆದೇಶದ ವಿವರ: ಪೊಲೀಸರು ಈತನ ಮೇಲೆ ನಿರಂತರ ನಿಗಾ ಇರಿಸಿದ್ದರೂ ಸಹ, ಈತ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದನು. ಈ ಹಿನ್ನೆಲೆಯಲ್ಲಿ ಕಾರವಾರ ನಗರ ಪೊಲೀಸ್ ನಿರೀಕ್ಷಕರು ನೀಡಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಾನವ ಹಕ್ಕುಗಳ ರಕ್ಷಣೆ ಅಧಿಕಾರಿಗಳ ಹೊಣೆ: ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ದಿನಾಂಕ 22-04-2026 ರಂದು ಹೊರಡಿಸಲಾದ ಆದೇಶದಂತೆ, ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ದಿನಾಂಕ 27-04-2026 ರಂದು ಕಾರವಾರ ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಆರೋಪಿಯನ್ನು ಅಜ್ಜಂಪುರ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಮುಂದಿನ ಆರು ತಿಂಗಳ ಕಾಲ ಈತನು ಉತ್ತರ ಕನ್ನಡ ಜಿಲ್ಲೆಯೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.





