ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಅಂಕೋಲಾದ ಅಕ್ಷಯ ನಾಯ್ಕ ಮತ್ತು ಕಾರವಾರದ ವೇತನ್ ತಾಂಡೇಲ ಬಂಧಿತ ಆರೋಪಿಗಳು. 2024ರ ಆಗಸ್‌ನಲ್ಲಿ ಹನಿಟ್ರ್ಯಾಪ್‌ಗೆ ಒಳಗಾದ ಆರೋಪಿಗಳು ನೌಕಾನೆಲೆಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಒದಗಿಸಿದ್ದಾರೆ ಎಂದು ಆರೋಪಿಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಐಎ ಅಧಿಕಾರಿಗಳು ಸೋಮವಾರವೇ ಹೈದರಾಬಾದ್‌ನಿಂದ ಕಾರವಾರಕ್ಕೆ ಬಂದಿದ್ದರು. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಅಗತ್ಯ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಮಂಗಳವಾರ ಮುಂಜಾನೆ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಆರೋಗ್ಯ ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆ ಬಳಿಕ, ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.