ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ, 15 ದಿನಗಳ ಒಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಗುಡ್ಡಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ರಸ್ತೆ ಸೇರಿದಂತೆ ವಿವಿಧ ಮೂಲಭೂತ ಸಮಸ್ಯೆಗಳ ಕುರಿತು ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದು ನೂರಾರು ವರ್ಷಗಳ ಪ್ರಮುಖ ಬೇಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಅರಣ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಜಂಟಿಯಾಗಿ ಯೋಜನೆ ರೂಪಿಸಿ, ಅಂದಾಜು ವೆಚ್ಚದ ವಿವರದೊಂದಿಗೆ 15 ದಿನಗಳಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅದರ ಪ್ರತಿಯನ್ನು ಲೋಕಾಯುಕ್ತ ಸಂಸ್ಥೆಗೂ ನೀಡಬೇಕು ಎಂದು ಸೂಚಿಸಿದರು. ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಯಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡು, ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
ಈ ಸುದ್ದಿ ಓದಿದ್ದೀರಾ? ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ
ಅಗತ್ಯವಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಫಣೀಂದ್ರ ತಿಳಿಸಿದರು. ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸುವಂತೆ ಸೂಚಿಸಿದ ಅವರು, ಶಿಕ್ಷಣಕ್ಕಾಗಿ ಮಕ್ಕಳು ಪ್ರತಿದಿನ ಕಡಿದಾದ ರಸ್ತೆಯಲ್ಲಿ 8 ಕಿ.ಮೀ.ಗೂ ಹೆಚ್ಚು ದೂರ ಅರಣ್ಯ ಪ್ರದೇಶದ ಮೂಲಕ ಸಂಚರಿಸಬೇಕಾಗಿದೆ.
ಆದ್ದರಿಂದ ಮಕ್ಕಳಿಗೆ ನಗರಸಭೆಯಿಂದ ಅಗತ್ಯ ವಾಹನ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ತಿಂಗಳಿಗೆ ಒಂದು ಬಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು. ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ಹೊಸದಾಗಿ ನಿರ್ಮಿಸುವ ಅಗತ್ಯವಿದ್ದು, ಈ ಕುರಿತು ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಪ್ರಸ್ತುತ ಇರುವ ಶಾಲೆಯಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದರು. ಗ್ರಾಮಸ್ಥರ ಮತ್ತೊಂದು ಪ್ರಮುಖ ಸಮಸ್ಯೆಯಾಗಿರುವ ಆಸ್ತಿ ಹಕ್ಕುಪತ್ರದ ವಿಚಾರವನ್ನು ಶೀಘ್ರ ಬಗೆಹರಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಡ್ಡಳ್ಳಿಗೆ ಸಂಪರ್ಕ ಕಲ್ಪಿಸುವ ಅತ್ಯಂತ ಕಡಿದಾದ ರಸ್ತೆಯಲ್ಲಿ ಸಂಚರಿಸಿ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿದ ಉಪಲೋಕಾಯುಕ್ತರು, ತಮ್ಮ ಅಧಿಕೃತ ವಾಹನವನ್ನು ಬಿಟ್ಟು ಸಾಮಾನ್ಯ ಜೀಪ್‌ನಲ್ಲಿ ಗ್ರಾಮಕ್ಕೆ ತೆರಳಿದ್ದು ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್, ಡಿವೈಎಸ್ಪಿ ಧನ್ಯಾ ನಾಯ್ಕ, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ ಹಾಗೂ ಗುಡ್ಡಳ್ಳಿ ಗ್ರಾಮಸ್ಥರು ಇದ್ದರು.




