ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಸಾಮರ್ಥ್ಯ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ ಟಿ ಬೇಬಿಮ್ಯಾಥ್ಯೂ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‌ಸಿಎಸ್‌ಟಿಸಿ), ಮಡಿಕೇರಿ ನಗರದ ಕೊಡಗು ವಿದ್ಯಾಲಯ, ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ನಗರದ ಕೊಡಗು ವಿದ್ಯಾಲಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31ನೇ ‘ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023’ ವನ್ನು ಉದ್ಘಾಟಿಸಿ ಮಾತನಾಡಿದರು.
“ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆ ನಡೆಸಲು ಸಹಕಾರಿಯಾಗಿದ್ದು, ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಸಹಕಾರಿಯಾಗಿದೆ” ಎಂದರು.
“ಕೊಡಗಿನಲ್ಲಿ ಜಿಲ್ಲಾ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಸಮಾವೇಶ ಸೇರಿದಂತೆ ಪರಿಸರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಹಾಗೂ ಪರಿಸರದ ಆಸಕ್ತಿ ಬೆಳೆಸುತ್ತಿರುವುದು ಶ್ಲಾಘನೀಯವಾದುದು” ಎಂದು ಬೇಬಿಮ್ಯಾಥ್ಯೂ ಹೇಳಿದರು.
ಸಮಾವೇಶದ ತಾಂತ್ರಿಕ ಅಧಿವೇಶನಕ್ಕೆ ಚಾಲನೆ ನೀಡಿ ಮಕ್ಕಳೊಂದಿಗೆ ಅಭಿಪ್ರಾಯ ಹಂಚಿಕೊಂಡ ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ ಎನ್ ವೀಣಾ ಮಾತನಾಡಿ, “ವಿದ್ಯಾರ್ಥಿಗಳು ವಿಜ್ಞಾನಿಗಳ
ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಂಶೋಧನೆ ಕೈಗೊಂಡು ವಿಜ್ಞಾನದ ಸವಾಲುಗಳನ್ನು ಎದುರಿಸುವಲ್ಲಿ ಸನ್ನದ್ಧರಾಗಬೇಕು” ಎಂದರು.
ಕಿರಿಯ ವಿಜ್ಞಾನಿಗಳು ತಯಾರಿಸಿದ್ದ ವೈಜ್ಞಾನಿಕ ಯೋಜನೆ ಹಾಗೂ ಮಾದರಿಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ ಅವರು, “ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು” ಎಂದರು.
“ವಿದ್ಯಾರ್ಥಿಗಳು ಇಂತಹ ಸೂಕ್ತ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು” ಎಂದು ವೀಣಾ ಹೇಳಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | 146 ಮಂದಿ ಸಂಸದರ ಅಮಾನತು; ಕಾಂಗ್ರೆಸ್ ಸಮಿತಿ ಖಂಡನೆ
ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ ಭಾಸ್ಕರ್ ಮಾತನಾಡಿ, “ಪ್ರಾಕೃತಿಕ ಸಂಪನ್ಮೂಲ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಪರಿಸರ ಮತ್ತು ವನ್ಯಜೀವಿಗಳ ಪಾತ್ರ ಪ್ರಮುಖವಾದುದು. ಜಿಲ್ಲೆಯಲ್ಲಿ ನಡೆಯುತ್ತಿರುವ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಬಗ್ಗೆ ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನ ಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಲು ಪ್ರತಿಯೊಬ್ಬರೂ ಪಣ ತೊಡಬೇಕಿದೆ” ಎಂದರು.
“ಕೊಡಗಿನ ಪ್ರಾಕೃತಿಕ ಪರಿಸರವು ಪ್ರಯೋಗಶಾಲೆಯಂತಿದ್ದು, ಇಲ್ಲಿನ ನೈಸರ್ಗಿಕ ಅರಣ್ಯ ಹಾಗೂ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು. ಇಂತಹ ವಿಜ್ಞಾನ ಸಮಾವೇಶಗಳು ವಿದ್ಯಾರ್ಥಿಗಳಿಗೆ ಪರಿಸರ ವ್ಯವಸ್ಥೆಯನ್ನು ಅರಿತು ಸ್ವತಃ ಪರಿಹಾರ ಕಂಡುಕೊಂಡು ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಒದಗಿಸುತ್ತವೆ” ಎಂದರು.