ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನದಲ್ಲಿ ಗಾಂಧೀಜಿಯವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ 50 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಏರ್ಪಡಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸ್ಮಾರಕ ಭವನ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
“ಗಾಂಧಿ ಸ್ಮಾರಕ ಭವನ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಯಾವುದೇ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಳ್ಳಬಾರದು” ಎಂದು ಈ ವೇಳೆ ತಾಕೀತು ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
“ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನವನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು” ಎಂದು ಶಾಸಕರು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ಎಂ ಪಿ ಸುಜಾ ಕುಶಾಲಪ್ಪ ಮಾತನಾಡಿ, “ಗಾಂಧೀಜಿಯವರ ಚಿತಾಭಸ್ಮವಿರುವುದು ಗುಜರಾತ್ ರಾಜ್ಯದ ಸಬರಮತಿ ಹಾಗೂ ಮಡಿಕೇರಿಯಲ್ಲಿ ಎಂಬುದು ವಿಶೇಷವಾಗಿದೆ. ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನ್ನು ಆಕರ್ಷಣೀಯವಾಗಿ ನಿರ್ಮಿಸಬೇಕು” ಎಂದು ಸಲಹೆ ನೀಡಿದರು.
ಮಾಜಿ ಸಚಿವರು ಎಂ ಸಿ ನಾಣಯ್ಯ ಮಾತನಾಡಿ, “ಮಹಾತ್ಮ ಗಾಂಧೀಜಿ ಅವರು ಮಡಿಕೇರಿಗೆ ಭೇಟಿ ನೀಡಿ ಗಾಂಧಿ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಹಾಗಾಗಿ ಈ ಸ್ಥಳಕ್ಕೆ ಗಾಂಧಿ ಮೈದಾನವೆಂಬ ಹೆಸರು ಬಂದಿದೆ” ಎಂದು ತಿಳಿಸಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ ಪಿ ರಮೇಶ್ ಮಾತನಾಡಿ, “ಜಿಲ್ಲಾಡಳಿತ ಸಹಕಾರದಲ್ಲಿ ಸರ್ವೋದಯ ಸಮಿತಿ ವತಿಯಿಂದ ಕಳೆದ 65 ವರ್ಷಗಳಿಂದ ಸರ್ವಧರ್ಮ ಪ್ರಾರ್ಥನೆ ಮಾಡಿಕೊಂಡು ಬರಲಾಗಿದೆ. ಕಳೆದ ವರ್ಷ 50 ಲಕ್ಷ ರೂ. ಬಿಡುಗಡೆಯಾಗಿದ್ದು, ಸ್ಮಾರಕ ಉದ್ಯಾನವನ ಕಾಮಗಾರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು” ಎಂದು ಕೋರಿದರು.
“ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದಾಗ ಅವರ ಅಂತಿಮ ದರ್ಶನಕ್ಕೆ ತೆರಳಿದ ಕೊಡಗು ಜಿಲ್ಲೆಯ ಸರ್ವೋದಯ ಸಮಿತಿಯ ಮುಖಂಡರು ಕೊಡಗಿಗೆ ತಂದಿದ್ದ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾಡಳಿತದ ವಶದಲ್ಲಿ ಜಿಲ್ಲಾ ಖಜಾನೆಯಲ್ಲಿ ಇರಿಸಲಾಗಿದ್ದು, ಚಿತಾಭಸ್ಮವನ್ನು ಗಾಂಧೀಜಿ ಸ್ಮಾರಕದಲ್ಲಿ ಇರಿಸಿ ರಾಜ್‍ಘಾಟ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಬೇಕಿದೆ” ಎಂದು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ
“ಪ್ರತಿ ವರ್ಷ ಜನವರಿ, 30 ರಂದು ಜಿಲ್ಲಾ ಖಜಾನೆಯಿಂದ ಚಿತಾಭಸ್ಮವನ್ನು ಹೊರತೆಗೆದು ಪೊಲೀಸ್ ಗೌರವದೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಹೊರಟು ಮತ್ತೆ ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಇರಿಸಿಕೊಂಡು ಬರಲಾಗಿದೆ” ಎಂದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ ಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಸೇರಿದಂತೆ ಬಹುತೇಕರು ಇದ್ದರು.