ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವನಸಿರಿ ವನಧನ ಯೋಜನೆಯಡಿ ಸಿದ್ದಾಪುರ ಸಂಜೀವಿನಿ ಒಕ್ಕೂಟದ ಮಹಿಳೆಯರು ಸಂಗ್ರಹಿಸಿದ ಸುಮಾರು 25 ಲೀಟರ್ ಜೇನುಹನಿಯನ್ನು ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಶ್ ಅವರು ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಉದ್ಯೋಗ ಸೃಷ್ಟಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿಯ ಸಹಕಾರದೊಂದಿಗೆ ಮಹಿಳೆಯರಿಗೆ ವನ ಉತ್ಪನ್ನಗಳ ಸಂಗ್ರಹಣೆ ಹಾಗೂ ಮೌಲ್ಯವರ್ಧನೆ ಕುರಿತ ತರಬೇತಿ ನೀಡಲಾಗಿದ್ದು, ಅದರ ಫಲವಾಗಿ ಮಹಿಳೆಯರು ಜೇನುಹನಿ ಸಂಗ್ರಹಣೆ ಮೂಲಕ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಂಜೀವಿನಿ ಒಕ್ಕೂಟವು ಸರ್ಕಾರಿ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಂಡು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ದಿನಾಚರಣೆ ಪ್ರಶಸ್ತಿಯನ್ನು ಪಡೆದಿರುವುದನ್ನು ಅವರು ಸ್ಮರಿಸಿದರು. ಸಂಘಟನೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.
ಸಂಘಟನೆಯ ಅಧ್ಯಕ್ಷೆ ರೀನಾ ತುಳಸಿ ಮಾತನಾಡಿ, ಸಂಜೀವಿನಿ ಒಕ್ಕೂಟವು ಮೀನು ಕೃಷಿ, ಹೊಲಿಗೆ ತರಬೇತಿ ಹಾಗೂ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೂಲಕ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ ಎಂದು ತಿಳಿಸಿದರು. ಮಹಿಳಾ ಸಂತೆಗಳ ಮೂಲಕ ಉತ್ಪನ್ನಗಳ ಮಾರಾಟ ನಡೆಯುತ್ತಿದ್ದು, ಅಕ್ಕ ಕಾಫೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಂಡರೆ ಮಹಿಳೆಯರ ವಿವಿಧ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ?ಕೊಡಗು | ಅತಿಥಿ ಶಿಕ್ಷಕರು, ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ವ್ಯವಸ್ಥಾಪಕಿ ಚಾಂದಿನಿ, ಇಂಡಸ್ಟ್ರೀ ಫೌಂಡೇಶನ್ನ ಲೇಖನಿ, ತಾಲೂಕು ವ್ಯವಸ್ಥಾಪಕ ಮಂಜುನಾಥ್, ವಿಡಿವಿಕೆ ಸಮಿತಿ ಕಾರ್ಯದರ್ಶಿ ಇಂದಿರಾ, ಸದಸ್ಯೆಯರಾದ ಯಮುನಾ, ಸುಮತಿ, ವಸಂತಿ ಸೇರಿದಂತೆ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.




