ಕೊಡಗು ಜಿಲ್ಲೆಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ ಒಟ್ಟು 207 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 80 ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳು, ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಶೀಘ್ರ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ನಡೆದ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಗೆ ಮುನ್ನ ಅವರು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಕರ್ತವ್ಯ ನಿರ್ವಹಿಸಬೇಕು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದ್ದು, ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಜೀವನ ನಡೆಸುವ ಹಕ್ಕಿದೆ. ಆ ಹಕ್ಕುಗಳಿಗೆ ಪೂರಕವಾದ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಆಡಳಿತ ವ್ಯವಸ್ಥೆಯ ಮೇಲಿದೆ ಎಂದು ಹೇಳಿದರು.
ಪ್ರತಿಯೊಬ್ಬ ನಾಗರಿಕನಿಗೂ ಕನಿಷ್ಠ ಮೂಲಭೂತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ತಾಯಿ ಹಾಗೂ ಗರ್ಭದಲ್ಲಿರುವ ಮಗುವಿನ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು ಎಂದು ಅವರು ತಿಳಿಸಿದರು.

ಸರ್ಕಾರಿ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯವಾಗಬಾರದು. ಸಮಸ್ಯೆಗಳ ಮೂಲವನ್ನು ಅರಿತು ಕಾನೂನು ಉಲ್ಲಂಘನೆ ಹಾಗೂ ಕರ್ತವ್ಯಲೋಪಕ್ಕೆ ಅವಕಾಶ ನೀಡದೆ ಸಮಯೋಚಿತವಾಗಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಾಸಾಶನ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ವಿತರಿಸಬೇಕು. ಕಚೇರಿ ಕಾರ್ಯನಿರ್ವಹಣೆಯಲ್ಲಿ ನಿಧಾನಗತಿ ಇರಬಾರದು. ಸರ್ಕಾರಿ ಸೇವಕರಲ್ಲಿ ದುರಾಡಳಿತಕ್ಕೆ ಅವಕಾಶವಿಲ್ಲದೆ, ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯ ಮೂಡುವಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜನರಿಗೆ ಹತ್ತಿರವಾಗಿರುವ ಅಧಿಕಾರಿಗಳು ಮನೆ ಬಾಗಿಲಿಗೆ ಸೇವೆ ತಲುಪಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಮಾನ ಅವಕಾಶ ದೊರೆಯುವಂತೆ ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸಿ, ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ವಾರ್ಷಿಕ ಆದಾಯ ಮೂರು ಲಕ್ಷ ರೂಪಾಯಿಗಿಂತ ಕಡಿಮೆ ಇರುವ ಕುಟುಂಬಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಂತರ ನಡೆದ ವಿಚಾರಣೆಯಲ್ಲಿ ಭೂಮಿ ಸಂಬಂಧಿತ ವಿವಾದಗಳು, ಕಟ್ಟಡ ಪರವಾನಗಿ, ವಿದ್ಯುತ್ ಸಂಪರ್ಕ, ಬಸ್ ಸಂಪರ್ಕ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ದೂರುದಾರರೊಂದಿಗೆ ಚರ್ಚಿಸಿ ಪ್ರಕರಣಗಳ ವಿಚಾರಣೆ ನಡೆಸಲಾಯಿತು.
ಈ ಸುದ್ದಿ ಓದಿದ್ದೀರಾ?ಮಡಿಕೇರಿ | ವೈಜ್ಞಾನಿಕ ಕಸ ವಿಲೇವಾರಿಗೆ ಒತ್ತು ನೀಡಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತೀವ್ರ ಎಚ್ಚರಿಕೆ
ಸಭೆಯಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಕಿರಣ್ ಪಾಟೀಲ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ, ಲೋಕಾಯುಕ್ತ ಎಸ್ಪಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ, ತಹಶೀಲ್ದಾರ್ ಶ್ರೀಧರ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಂಜುನಾಥ ರಾಮಣ್ಣ, ಪೌರಾಯುಕ್ತ ಎಚ್.ಆರ್. ರಮೇಶ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




