ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ. (AIKMCC) ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ಭಾನುವಾರ ಮಡಿಕೇರಿಯಲ್ಲಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಉತ್ತಮ ಆರೋಗ್ಯ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಸಮಾಜ ಸೇವಾ ಸಂಸ್ಥೆಗಳ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಎ.ಐ.ಕೆ.ಎಂ.ಸಿ.ಸಿ. ಸಂಸ್ಥೆ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಇಂತಹ ಸೇವಾ ಸಂಘಟನೆಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯವನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಕರೆ ನೀಡಿದರು.
ಆರೋಗ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಸಂಘ-ಸಂಸ್ಥೆಗಳನ್ನು ಗುರುತಿಸಿ, ಅವರಿಗೆ ಅಗತ್ಯ ನೆರವು ಹಾಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ಹೊಸ ನಿಯಮಗಳನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಕೆ. ನೌಶಾದ್ ಮಾತನಾಡಿ, ಎ.ಐ.ಕೆ.ಎಂ.ಸಿ.ಸಿ. ದೇಶದಾದ್ಯಂತ 117 ಘಟಕಗಳನ್ನು ಹೊಂದಿದ್ದು, 14,700ಕ್ಕೂ ಹೆಚ್ಚು ಸ್ವಯಂಸೇವಕರು ಆರ್ಥಿಕವಾಗಿ ದುರ್ಬಲ ರೋಗಿಗಳ ಮನೆಗಳಿಗೆ ತೆರಳಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಸುಮಾರು 1,200 ಹಾಸಿಗೆ ಹಿಡಿದಿರುವ (ಬೆಡ್ ಪೇಷೆಂಟ್) ರೋಗಿಗಳ ಆರೈಕೆಯನ್ನು ನಿರಂತರವಾಗಿ ನಡೆಸಲಾಗುತ್ತಿದ್ದು, ತುರ್ತು ಆರೋಗ್ಯ ನೆರವಿಗಾಗಿ 95591 63936 ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ?ಕೊಡಗು | ಅತಿವೃಷ್ಟಿ-ಅನಾವೃಷ್ಟಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಲಿ: ಸಚಿವ ಯು.ಟಿ. ಖಾದರ್
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೊಡಗು ರಕ್ತನಿಧಿ ಘಟಕದ ಮುಖ್ಯಸ್ಥ ಡಾ. ಕರುಂಬಯ್ಯ, ಸಂಸ್ಥೆಯ ಮುಖ್ಯಸ್ಥ ಅಬ್ದುಲ್ ಗಫೂರ್, ಘಟಕದ ಅಧ್ಯಕ್ಷ ರಿಯಾಜ್, ಪ್ರಧಾನ ಕಾರ್ಯದರ್ಶಿ ಶಮೀರ್, ಕೆಪಿಸಿಸಿ ಸದಸ್ಯ ಯಾಕುಬ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕಲೀಲ್ ಭಾಷಾ, ಕೋಚನ ಚೇತನ್, ಎಂ.ಎ. ನಿಸಾರ್ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಇದ್ದರು.




