ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಗ್ರಹ ದಳ ಹಾಗೂ ಶ್ವಾನದಳದಿಂದ ವ್ಯಾಪಕ ತಪಾಸಣೆ ನಡೆಸಲಾಯಿತು.
ನ್ಯಾಯಾಲಯದ ಅಧಿಕಾರಿಗಳ ಗಮನಕ್ಕೆ ಬೆದರಿಕೆ ಇ-ಮೇಲ್ ಬಂದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದ ಕೊಡಗು ಜಿಲ್ಲಾ ಪೊಲೀಸರು, ಬಾಂಬ್ ನಿಗ್ರಹ ದಳ ಮತ್ತು ಶ್ವಾನದಳದ ಸಿಬ್ಬಂದಿ ನ್ಯಾಯಾಲಯದ ಕಟ್ಟಡಕ್ಕೆ ಆಗಮಿಸಿ ಸಮಗ್ರ ಪರಿಶೀಲನೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.
ಸುರಕ್ಷತೆಯ ದೃಷ್ಟಿಯಿಂದ ನ್ಯಾಯಾಲಯದ ಆವರಣಕ್ಕೆ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಇದರಿಂದ ನ್ಯಾಯಾಲಯದ ಕಾರ್ಯಚಟುವಟಿಕೆಗಳ ಮೇಲೂ ಕೆಲಕಾಲ ಪರಿಣಾಮ ಬೀರಿತು.

ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆದರಿಕೆ ಇ-ಮೇಲ್ ಕಳುಹಿಸಿದ ವ್ಯಕ್ತಿ ಅಥವಾ ಸಂಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ನ್ಯಾಯಾಧೀಶರು, “ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣವೇ ಬಾಂಬ್ ನಿಗ್ರಹ ದಳ ಹಾಗೂ ಶ್ವಾನದಳದಿಂದ ಸಂಪೂರ್ಣ ನ್ಯಾಯಾಲಯ ಕಟ್ಟಡವನ್ನು ತಪಾಸಣೆ ಮಾಡಲಾಗಿದೆ. ಯಾವುದೇ ಸಂಶಯಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಿಲ್ಲ. ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದ್ದರೂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿ ಜೀತಪದ್ಧತಿ ಇನ್ನೂ ಜೀವಂತ: ಬಾಲ ಕಾರ್ಮಿಕರೂ ಸೇರಿ 18 ಮಂದಿ ರಕ್ಷಣೆ

ಘಟನೆಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾದ ಈ ಘಟನೆ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.




