ಕೊಡಗು ಜಿಲ್ಲೆಯ ಮಡಿಕೇರಿ ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಸಮೀಪದ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಸ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಘಟಕದ ಪ್ರವೇಶ ದ್ವಾರದಿಂದಲೇ ರಸ್ತೆಯ ದುಸ್ಥಿತಿಯನ್ನು ಕಂಡ ಅವರು, “ರಸ್ತೆಯನ್ನೇ ಸರಿಯಾಗಿ ನಿರ್ವಹಿಸದಿದ್ದರೆ ಕಸವನ್ನು ವೈಜ್ಞಾನಿಕವಾಗಿ ಹೇಗೆ ವಿಲೇವಾರಿ ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಹೆಚ್ಚಿನ ಮಳೆಯ ಪ್ರದೇಶವಾಗಿರುವ ಕೊಡಗಿನಲ್ಲಿ ಕಸ ನಿರ್ವಹಣೆ ಅತ್ಯಂತ ಜವಾಬ್ದಾರಿಯಿಂದ ನಡೆಯಬೇಕು ಎಂದು ಸೂಚಿಸಿದರು.
ಕಸ ವಿಲೇವಾರಿ ಕೇಂದ್ರದ ನಿರ್ವಹಣೆ ಅತ್ಯಂತ ಕಳಪೆಯಾಗಿದ್ದು, ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕ್ರಮ ಪಾಲನೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಸದಿಂದ ಹೊರಹೊಮ್ಮುವ ಮಲೀನ ನೀರು ಎಲ್ಲಿಗೆ ಹರಿಯುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ಇಲ್ಲದಿರುವುದನ್ನೂ ಪ್ರಶ್ನಿಸಿದ ಅವರು, ಮಳೆಗಾಲದಲ್ಲಿ ಈ ನೀರು ಬೋರ್‌ವೆಲ್, ತೊರೆ ಹಾಗೂ ಜಲಮೂಲಗಳನ್ನು ಕಲುಷಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದರು.
ಪರಿಸರ ಇಲಾಖೆ, ನಗರಸಭೆ, ವೈದ್ಯಕೀಯ, ಪಶುವೈದ್ಯಕೀಯ, ಕುಡಿಯುವ ನೀರು ಪೂರೈಕೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕೆರೆ, ಕಾಲುವೆ ಹಾಗೂ ತೊರೆಗಳಿಗೆ ಕಸದ ನೀರು ಸೇರುವುದನ್ನು ತಡೆಯಬೇಕು ಎಂದು ನಿರ್ದೇಶನ ನೀಡಿದರು. ನಿರ್ಲಕ್ಷ್ಯ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದರು.
This video cannot be played in your browser. Open the video directly
ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪ್ರಸ್ತುತ ಇರುವ ಆರು ಎಕರೆ ಜಾಗ ಸಾಕಾಗುವುದಿಲ್ಲವಾದ್ದರಿಂದ ಭವಿಷ್ಯದ ಅಗತ್ಯತೆ ಗಮನಿಸಿ ಹೊಸ ಜಾಗವನ್ನು ಗುರುತಿಸಬೇಕು ಎಂದು ಸಲಹೆ ನೀಡಿದರು. ಘಟಕದ ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.
ಕಸ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪ ಲೋಕಾಯುಕ್ತರು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಕಸ ವಿಲೇವಾರಿ ಘಟಕದಲ್ಲಿ ಸ್ವಚ್ಛತೆ ಹಾಗೂ ವೈಜ್ಞಾನಿಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಮಡಿಕೇರಿ ನಗರ ಮಾರುಕಟ್ಟೆಗೆ ಭೇಟಿ ನೀಡಿದ ಉಪ ಲೋಕಾಯುಕ್ತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ ನಿರ್ವಹಣೆ, ಬೆಳಕು ಹಾಗೂ ಸ್ವಚ್ಛತಾ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಮಳೆ ನೀರು ಮಾರುಕಟ್ಟೆಯೊಳಗೆ ನುಗ್ಗುತ್ತಿರುವುದು, ಸಮರ್ಪಕ ಬೆಳಕಿನ ಕೊರತೆ ಹಾಗೂ ಎಲ್ಲೆಂದರಲ್ಲಿ ಕಸ ಹಾಕುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಾಗೃತಿ ಫಲಕಗಳನ್ನು ಅಳವಡಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಬೇಕು ಎಂದು ಸೂಚಿಸಿದರು.
ಮಾರುಕಟ್ಟೆಗೆ ಗೇಟ್ ನಿರ್ಮಾಣ, ಹೆಚ್ಚುವರಿ ವಿದ್ಯುತ್ ದೀಪಗಳು, ಟ್ಯೂಬ್‌ಲೈಟ್ ಅಳವಡಿಕೆ, ಗಾಳಿ-ಬೆಳಕು ಸರಾಗವಾಗಿ ಹರಿಯುವ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉಪ ಲೋಕಾಯುಕ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೂ ದಿಢೀರ್ ಭೇಟಿ ನೀಡಿ, ಸ್ವಚ್ಛತೆ, ಶೌಚಾಲಯಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರತಿದಿನ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುವುದು, ಶೌಚಾಲಯಗಳನ್ನು ಸುಸ್ಥಿತಿಯಲ್ಲಿ ನಿರ್ವಹಿಸುವುದು ಹಾಗೂ ಗಡಿಯಾರ ಅಳವಡಿಸುವಂತೆ ಸಲಹೆ ನೀಡಿದರು.
ಈ ವೇಳೆ ಸಾರ್ವಜನಿಕರೊಬ್ಬರು ಮದೆನಾಡು, ಬೆಟ್ಟತ್ತೂರು ಹಾಗೂ ಕಾಟಕೇರಿ ಮಾರ್ಗಗಳಿಗೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸುವಂತೆ ಮನವಿ ಸಲ್ಲಿಸಿದರು.

ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಕುಶಾಲನಗರದ ಶಕ್ತಿ ವೃದ್ಧಾಶ್ರಮ ಹಾಗೂ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.
ಕಸ ವಿಲೇವಾರಿ ಘಟಕದ ನಿರ್ವಹಣೆ ತೃಪ್ತಿಕರವಾಗಿಲ್ಲದ ಕಾರಣ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಕಸ ವಿಲೇವಾರಿ ಘಟಕದಲ್ಲಿ ಸೊಳ್ಳೆ, ನೊಣ ಹಾಗೂ ಬೀದಿ ನಾಯಿಗಳ ಹಾವಳಿ ತಡೆದು, ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡುವುದು ಅತ್ಯಗತ್ಯ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?ಮಡಿಕೇರಿ ಆರ್‌ಟಿಒಗೆ ₹4.30 ಕೋಟಿ ವೆಚ್ಚದ ಆಧುನಿಕ ಸೆನ್ಸಾರ್ ಟೆಸ್ಟಿಂಗ್ ಟ್ರಾಕ್‌ಗೆ ಭೂಮಿಪೂಜೆ
ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಉಪ ಅರಣ್ಯ ಸಂರಕ್ಷಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.





