ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆದ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಜುಲೈ ಹಾಗೂ ಆಗಸ್ಟ್‌ನಲ್ಲಿ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದ್ದರೂ, ‘ಎಲ್ ನಿನೊ’ ಪರಿಣಾಮದಿಂದ ಮಳೆ ಕೊರತೆ ಎದುರಾದರೆ ಅನಾವೃಷ್ಟಿಯನ್ನೂ ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತ ಸಜ್ಜಾಗಿರಬೇಕು ಎಂದು ತಿಳಿಸಿದರು.
ಪ್ರಾಕೃತಿಕ ವಿಕೋಪಗಳು ಮುನ್ಸೂಚನೆ ನೀಡಿ ಬರುವುದಿಲ್ಲ. ಸಂಕಷ್ಟದ ಸಮಯದಲ್ಲಿ ಜನರಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಪ್ರಮುಖ ಕರ್ತವ್ಯವಾಗಿದ್ದು, ಮುಂದಿನ ಮೂರು ತಿಂಗಳು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ₹3.05 ಕೋಟಿ ಹಾಗೂ ಐದು ತಾಲ್ಲೂಕುಗಳ ತಹಶೀಲ್ದಾರರ ಪಿ.ಡಿ. ಖಾತೆಗಳಲ್ಲಿ ಒಟ್ಟು ₹1.41 ಕೋಟಿ ಲಭ್ಯವಿದ್ದು, ಅಗತ್ಯ ಕ್ರಮಗಳಿಗೆ ಹಣದ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಸಚಿವರು, ಒಡೆದಿರುವ ಪೈಪ್‌ಲೈನ್‌ಗಳನ್ನು ತ್ವರಿತವಾಗಿ ದುರಸ್ತಿಗೊಳಿಸಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಕುಡಿಯುವ ನೀರು ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ನಿರಂತರವಾಗಿ ಪರಿಶೀಲಿಸಬೇಕು ಹಾಗೂ ಬಾಕಿ ಇರುವ ಬೋರ್‌ವೆಲ್ ಕಾಮಗಾರಿ ಮತ್ತು ವಿದ್ಯುತ್ ಸಂಪರ್ಕದ ಕುರಿತು ಕೂಡಲೇ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.

ಸೆಸ್ಕ್, ಗ್ರಾಮೀಣಾಭಿವೃದ್ಧಿ, ಅರಣ್ಯ ಹಾಗೂ ಕುಡಿಯುವ ನೀರು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಳೆಗಾಲದಲ್ಲಿ ಹೆದ್ದಾರಿ ಬದಿಯ ಅಪಾಯಕಾರಿ ಮರಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಿ ವಿದ್ಯುತ್ ಮಾರ್ಗಗಳಿಗೆ ಹಾನಿಯಾಗದಂತೆ ಕ್ರಮವಹಿಸುವಂತೆ ತಿಳಿಸಿದರು. ರಸ್ತೆಗಳ ಗುಂಡಿಗಳನ್ನು ವೆಟ್‌ಮಿಕ್ಸ್ ಮೂಲಕ ಮುಚ್ಚಿ ಅಪಘಾತಗಳಿಗೆ ಅವಕಾಶ ನೀಡದಂತೆ ಸೂಚಿಸಿದರು.
ಶಾಲೆಗಳು, ಅಂಗನವಾಡಿಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ, ಸುರಕ್ಷತೆ, ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಆಹಾರ ಒದಗಿಸಲು ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದರು. ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿ ಲಭ್ಯವಿರಬೇಕು ಹಾಗೂ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ವಿಪತ್ತು ಸಂಭವಿಸಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಿಯಮಾನುಸಾರ ಪರಿಹಾರ ಒದಗಿಸಬೇಕು. ಸಂಕಷ್ಟದಲ್ಲಿರುವವರಿಗೆ ಆತ್ಮಸ್ಥೈರ್ಯ ತುಂಬುವ ರೀತಿಯಲ್ಲಿ ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸೆಸ್ಕ್ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ವಾಟ್ಸ್ಆ್ಯಪ್ ಸಂಖ್ಯೆ 8550001077, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 08272-221077, ಪೊಲೀಸ್ ಸಹಾಯವಾಣಿ 112 ಹಾಗೂ ಸೆಸ್ಕ್ ಸಹಾಯವಾಣಿ 191ಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಸೋಮವಾರಪೇಟೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪೈಪ್‌ಲೈನ್ ಹಾನಿಯಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಶಾಸಕ ಎ.ಎಸ್. ಪೊನ್ನಣ್ಣ ಗುಂಡಿಬಿದ್ದ ರಸ್ತೆಗಳನ್ನು ತ್ವರಿತವಾಗಿ ದುರಸ್ತಿಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ರಸಗೊಬ್ಬರ ಅಂಗಡಿಗಳಲ್ಲಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ: ರೈತ ಮುಖಂಡರ ಆಗ್ರಹ
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.




