ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲ ಪ್ರದೇಶದಲ್ಲಿ ಶುಕ್ರವಾರದಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ಕಾವೇರಿ ತುಂಬಿ ಹರಿದಿದೆ. ಹಾರಂಗಿಯಿಂದ 13,000 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ. ಗಾಳಿ ಮಳೆ ಹೆಚ್ಚಾಗುವ ಮುನ್ಸೂಚನೆ ದೊರೆಯುತ್ತಿದ್ದಂತೆ, ಮುಂಜಾಗ್ರತಾ ಕ್ರಮವಾಗಿ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಲಕಾವೇರಿ-ಭಾಗಮಂಡಲ ವ್ಯಾಪ್ತಿಯಲ್ಲೂ ನಿರಂತರ ಮಳೆ ಸುರಿದಿದೆ. ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಭರ್ತಿಯಾಗಿದ್ದು, ತ್ರಿವೇಣಿ ಸಂಗಮದ ಗಾರ್ಡನ್ ಬಹುತೇಕ ಜಲಾವೃತವಾಗಿದೆ. ಕಾವೇರಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.
ಮಳೆ-ಗಾಳಿಯ ರಭಸಕ್ಕೆ ಮಡಿಕೇರಿ ನಗರದ ಸುಬ್ರಮಣ್ಯ ನಗರದ ಸ್ಪಟಿಕಾ ಲೇಔಟ್‌ನಲ್ಲಿ ಮನೆಯ ಮುಂಭಾಗದ ತಡೆಗೋಡೆ ಕುಸಿದಿದೆ. ಬಿದ್ದಪ್ಪ ಎಂಬವರ ಮನೆಯ ಬಳಿ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದಿದ್ದು, ಮನೆಗೂ ಹಾನಿಯಾಗುವ ಸಂಭವವಿದೆ. ಘಟನಾ ಸ್ಥಳಕ್ಕೆ ನಗರಸಭೆ ಕೌನ್ಸಿಲರ್ ಅಪ್ಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾರಂಗಿ ಜಲಾನಯನ ಪ್ರದೇಶದಲ್ಲೂ ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ 13,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.




