ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್ 12ರಂದು ಕೊಡಗು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ನ್ಯಾಯಾಲಯಕ್ಕೆ ದಾಖಲಾಗದ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಚೆಕ್ ಅಮಾನ್ಯ, ಬ್ಯಾಂಕ್ ಸಾಲ ವಸೂಲಾತಿ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ವಿವಾದಗಳು, ಮೋಟಾರು ವಾಹನ ಅಪಘಾತ ಪರಿಹಾರ, ಕಾರ್ಮಿಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂಸ್ವಾಧೀನ, ಕಂದಾಯ, ವೇತನ ಮತ್ತು ಭತ್ಯೆ, ಪಿಂಚಣಿ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.
ಇದರೊಂದಿಗೆ ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವೇದಿಕೆ, ಸಾಲ ವಸೂಲಾತಿ ನ್ಯಾಯಾಧಿಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಹಾಗೂ ಖಾಯಂ ಜನತಾ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನೂ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ.
ಲೋಕ ಅದಾಲತ್‌ನಲ್ಲಿ ಉಭಯ ಪಕ್ಷಕಾರರ ಒಪ್ಪಿಗೆಯ ಮೇರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಎರಡೂ ಪಕ್ಷಗಳಿಗೆ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ಪಾವತಿಸಿರುವ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ ಉಭಯ ಪಕ್ಷಗಳ ನಡುವಿನ ಬಾಂಧವ್ಯವೂ ಉಳಿಯಲಿದೆ.
ಲೋಕ ಅದಾಲತ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳು ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಭೌತಿಕ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಉಚ್ಚ ನ್ಯಾಯಾಲಯದ ಎಸ್‌ಒಪಿ ಮಾರ್ಗಸೂಚಿಗಳಂತೆ ನಡೆಯಲಿವೆ.
ಈ ವಿಷೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ 1800-425-90900 ಅಥವಾ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂರವಾಣಿ ಸಂಖ್ಯೆ 08272-222373 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.




