ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಉತ್ತಮ ಅಂಕ ಗಳಿಸಲು ಕಾರಣರಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತು, ಸತ್ಯತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ ಜ್ಞಾನ ಸಂಪಾದನೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಮುಖ್ಯ ಭಾಷಣಕಾರ ಶಕ್ತಿ ದಿನಪತ್ರಿಕೆ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಕೆಯ ಜೊತೆಗೆ ಜ್ಞಾನ ಸಂಪಾದನೆಗೂ ಒತ್ತು ನೀಡಬೇಕು. ಪತ್ರಿಕೆ, ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಮಯ ಪಾಲನೆ, ಪರಿಸರ ಕಾಳಜಿ, ಕಾನೂನು ಗೌರವ ಹಾಗೂ ದೇಶಭಕ್ತಿಯನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಏಳಿಗೆ ಸಾಧಿಸಬೇಕು. ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಕೊಡಗು ಚಾನಲ್ ಸಂಪಾದಕ ಜಿ.ವಿ. ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನ, ಆತ್ಮವಿಶ್ವಾಸ, ಶಿಸ್ತು ಹಾಗೂ ಮಾನವೀಯತೆ ಇರಬೇಕು. ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಹೇಳಿದರು.
ಉದ್ಯಮಿ ಕೆ.ಕೆ. ದಾಮೋದರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲೂ ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನವನ್ನು ಗೌರವದಿಂದ ಸ್ವೀಕರಿಸಬೇಕು ಎಂದರು.
ಈ ವಿಶೇಷ ಸುದ್ದಿ ಓದಿದ್ದೀರಾ?SIR: ಆಗಸ್ಟ್ 24ರ ಕರಡು ಪಟ್ಟಿಯ ಬಳಿಕವೇ ನಿಜವಾದ ಪರೀಕ್ಷೆ- ‘ಡಿಜಿಟಲ್ ಪ್ರಮಾಣಪತ್ರ’ ಯೋಜನೆ ಸಿದ್ಧವೇ?
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಸಂಸ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಕಳೆದ 12 ವರ್ಷಗಳಿಂದ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯ ನಡೆಸಲಾಗುತ್ತಿದೆ. ಸರ್ಕಾರಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದರು.
ಈ ವಿಶೇಷ ಸುದ್ದಿ ಓದಿದ್ದೀರಾ?SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ
ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 23 ವಿದ್ಯಾರ್ಥಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳೆಗಾರ ಎಂ.ಎಸ್. ಯೂಸಫ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಕ್ರಿಸ್ಟೋಫರ್. ಪ್ರಾಂಶುಪಾಲ ಪಿ.ಆರ್. ವಿಜಯ, ಕನ್ನಡ ಉಪನ್ಯಾಸಕ ಶಿವಪ್ಪ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.




