ರೆಪ್ತಕೋಸ್ ಬ್ರೆಟ್ ಆಂಡ್ ಕಂಪನಿ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ತಿಳಿಸಿರುವ ಮಾರ್ಗದರ್ಶಿ ಸೂತ್ರಗಳ ಅನ್ವಯ ಈಗಿನ ಬೆಲೆ ಏರಿಕೆಗೆ ಅನುಗುಣವಾಗಿ ರಾಜ್ಯದಲ್ಲಿನ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನ 36 ಸಾವಿರ ರೂ. ನಿಗದಿಪಡಿಸಬೇಕೆಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಆಗ್ರಹಿಸಿದರು.
ಸಿಐಟಿಯು ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ನಮ್ಮ ದೇಶದಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ಕನಿಷ್ಠ ವೇತನವನ್ನು ಪರಿಷ್ಕರಣೆ ಕಡ್ಡಾಯವಾಗಿ ಮಾಡಬೇಕೆಂದು ಕಾನೂನು ಇದ್ದರೂ, ರಾಜ್ಯದಲ್ಲಿ 7 ವರ್ಷಗಳ ನಂತರ 22 ಮೇ 2026 ರಂದು ಪರಿಷ್ಕರಣೆ ಮಾಡಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕನಿಷ್ಠ ವೇತನದಿಂದ ಒಂದು ಕೋಟಿಗಿಂತ ಹೆಚ್ಚಿನ ಕಾರ್ಮಿಕರಿಗೆ ಪ್ರಯೋಜನವಾಗಲಿದೆ ಎಂಬುದನ್ನು ಸಿಐಟಿಯು ಮನಗಾಣುತ್ತಲೇ ಹೆಚ್ಚಳ ಮಾಡಿರುವ ಕನಿಷ್ಠ ವೇತನವು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡಗಳಿಗೆ ಪೂರಕವಾಗಿಲ್ಲ. ಇವತ್ತಿನ ಬೆಲೆಗಳು ಮತ್ತು ಜೀವನ ವೆಚ್ಚಕ್ಕೆ ಅನುಗುಣವಾಗಿ ಸರಾಸರಿ 36 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. ಜೊತೆಗೆ 1 ಎಪ್ರಿಲ್ 2026ರಿಂದ ಪೂರ್ವನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿ 19 ವಿಭಾಗದ ಉದ್ದಿಮೆಗಳನ್ನು ಹೊರಗಿಟ್ಟಿರುವ ರಾಜ್ಯ ಸರ್ಕಾರದ ಕ್ರಮದಿಂದ ಬಹುಸಂಖ್ಯಾತ ಮಹಿಳಾ ಕಾರ್ಮಿಕರು ಕನಿಷ್ಠ ವೇತನ ಹೆಚ್ಚಳದಿಂದ ವಂಚಿತರಾಗಲಿದ್ದಾರೆ. ಪ್ರಸ್ತುತ ಮೇ 22 ರಂದು ಜಾರಿಗೆ ತಂದಿರುವ ಕನಿಷ್ಠ ವೇತನವನ್ನೆ ಈ 19 ಉದ್ದಿಮೆಗಳಿಗೂ ವಿಸ್ತರಿಸಿ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಸ್ಕೀಂ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕೆಂಬುದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ ಪ್ರಸ್ತುತ ಪ್ರಕಟಿತ ಕನಿಷ್ಠ ವೇತನದಿಂದ ಕಾರ್ಮಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ವೇತನ ಹೆಚ್ಚಳ ಆಗುವುದರಿಂದ ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಸರ್ಕಾರಿ ಕಛೇರಿಗಳು ಮತ್ತು ಕೈಗಾರಿಕೆಗಳಲ್ಲಿ ದುಡಿಯುವ ಗುತ್ತಿಗೆ, ಹೊರ ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಲು ವಿಶೇಷ ಮಸೂದೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದ್ದರಿಂದ ರಾಜ್ಯ ಸರ್ಕಾರ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು, ಇದರಂತೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಜಾರಿಯಾಗುವಂತೆ ಜಿಲ್ಲಾಡಳಿತ ಗಮನ ನೀಡಬೇಕು. ಜಿಲ್ಲೆಯ ಮಟ್ಟದಲ್ಲಿ ಹಲವು ವಿಭಾಗದ ಕಾರ್ಮಿಕರು ಅತ್ಯಂತ ಸಂಕಷ್ಠದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇವರನ್ನು ನಿವಾರಿಸಲು ಗಮನ ನೀಡಬೇಕು ಎಂದು ಒತ್ತಾಯಿಸಿ
ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಕೇಂದ್ರ ನಿಯಮಗಳನ್ನು ರೂಪಿಸಿ ಮೇ 8 ರಿಂದ ಜಾರಿಗೊಳಿಸಿದೆ. ಇದರಿಂದ ಕಾರ್ಮಿಕ ವರ್ಗವು ಸ್ವಾತಂತ್ಯ ಪೂರ್ವದಿಂದಲೂ ಹೋರಾಟಗಳಿಂದ ಪಡೆದಿರುವ ಮೂಲಭೂತ ಹಕ್ಕುಗಳು ಮೊಟಕುಗೊಳ್ಳಲಿದ್ದು, ಕಾರ್ಮಿಕರ ಶ್ರಮದ ಶೋಷಣೆ ಹೆಚ್ಚಾಗಲಿದೆ, ಕರ್ನಾಟಕದಲ್ಲಿ ಇರುವ ಕೈಗಾರಿಕಾ ಸಂಬAಧಗಳಿಗೆ ದಕ್ಕೆಯಾಗಲಿದೆ. ಇದು ಕರ್ನಾಟಕದ ಅಭಿವೃದ್ಧಿಗೆ ಮಾರಕವಾಗಲಿದ್ದು, ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ..? ಕೆಜಿಎಫ್ | ನಕಲಿ ಬಿತ್ತನೆ ಬೀಜ: ರೈತರಿಗೆ ಲಕ್ಷಾಂತರ ರೂ ನಷ್ಟ..! – ಈ ದಿನ.ಕಾಮ್
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಎ.ಆರ್.ಬಾಬು, ಬಿ.ಎಲ್.ಕೇಶವರಾವ್, ಎಂ.ಭೀಮರಾಜ್, ಆಂಜಲಮ್ಮ, ಕಲ್ಪನಾ, ಶಿವಾನಂದ್, ವೀರಭದ್ರ, ಜಯಲಕ್ಷ್ಮೀ, ಅಮರನಾರಾಯಣ, ಲಿಯೋ ರಾಜ, ಮತ್ತಿತರರು ಉಪಸ್ಥಿತರಿದ್ದರು.




