ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಮೂಲಕ ಪ್ರಜಾಸತ್ತಾತ್ಮಕ ಚಳವಳಿಗಳನ್ನು ದಮನಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಆರೋಪಿಸಿದರು.
ನಗರದ ಮೆಕ್ಕೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋರಾಟಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ವಿವಿಧ ರಾಜ್ಯಗಳಿಂದ ದೆಹಲಿಗೆ ತೆರಳುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಮೆಟ್ರೊ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ಹಲವು ಕಡೆ ವಿದ್ಯಾರ್ಥಿ ಮುಖಂಡರನ್ನು ಬಂಧಿಸಿ, ಕೆಲವರನ್ನು ಗೃಹಬಂಧನದಲ್ಲಿಡಲಾಗಿದೆ ಎಂದು ದೂರಿದರು.
ದೆಹಲಿಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಸಭೆಯಲ್ಲಿ ಭಾಗವಹಿಸಿರುವ ಮುಖಂಡರು ಹೊರಬರದಂತೆ ಕಚೇರಿ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜನರ ಪ್ರತಿಭಟಿಸುವ ಹಕ್ಕನ್ನು ಕಸಿದುಕೊಳ್ಳುವ ಇಂತಹ ಕ್ರಮಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳಿಂದ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿ ವೆಚ್ಚ ಹೆಚ್ಚಳ, ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದಿರುವುದು, ಕೃಷಿ ಉತ್ಪನ್ನಗಳ ಮಾರಾಟದಲ್ಲಿನ ಅನಿಶ್ಚಿತತೆ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ರೈತರ ಹಿತಾಸಕ್ತಿಗಳನ್ನು ರಕ್ಷಿಸಬೇಕಾದ ಸರ್ಕಾರ ಜನಪರ ಹೋರಾಟಗಳಿಗೆ ಅಡ್ಡಿಪಡಿಸುವುದು ಸರಿಯಲ್ಲ. ಪ್ರಜಾಪ್ರಭುತ್ವ ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ರೈತರು ಸೇರಿದಂತೆ ಎಲ್ಲ ಜನಪರ ಸಂಘಟನೆಗಳು ಒಗ್ಗೂಡಿ ಹೋರಾಡಬೇಕು ಎಂದು ಕರೆ ನೀಡಿದರು.
ಸಿಪಿಐಎಂ ತಾಲೂಕು ಕಾರ್ಯದರ್ಶಿ ನುಕ್ಕನಹಳ್ಳಿ ಶ್ರೀರಾಮ್ ಮಾತನಾಡಿ ದೆಹಲಿಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ಈ ಸಂದರ್ಭದಲ್ಲಿ ಮುಖಂಡರಾದ ಪಿ.ಶ್ರೀನಿವಾಸ್, ಅಪ್ಪಯ್ಯಣ್ಣ, ವಿಜಯಕೃಷ್ಣ, ಆನಂದ್ ಕುಮಾರ್, ಭೀಮರಾಜ್, ನಾರಾಯಣರೆಡ್ಡಿ, ಬೀರಾಜು, ಮುಂತಾದವರು ಇದ್ದರು




