ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ, ಸಕಾಲದಲ್ಲಿ ವೈದ್ಯಕೀಯ ನೆರವು ದೊರೆತಿತ್ತೇ ಹಾಗೂ ಕಂಪನಿ ಆಡಳಿತದ ನಿರ್ಲಕ್ಷ್ಯವಿತ್ತೇ ಎಂಬುದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು. ಮೃತ ಮಹಿಳೆಯ ಕುಟುಂಬಕ್ಕೆ ಕಂಪನಿಯು ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು. ಕೈಗಾರಿಕಾ ಪ್ರದೇಶದಲ್ಲಿ ಆಧುನಿಕ ವೈದ್ಯಕೀಯ ಕೇಂದ್ರ, ತುರ್ತು ಚಿಕಿತ್ಸಾ ಸೌಲಭ್ಯ, ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ, ಆಂಬುಲೆನ್ಸ್ ಹಾಗೂ ಜೀವ ರಕ್ಷಕ ಉಪಕರಣಗಳನ್ನು ಒದಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್ vs ಮಾಜಿ ಸಚಿವ ಸುಧಾಕರ್ ವಾಕ್ಸಮರ!
ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಘಟನೆಯ ಸಮಗ್ರ ತನಿಖೆ ನಡೆಸಬೇಕು. ನರಸಾಪುರ ಕೈಗಾರಿಕಾ ಪ್ರದೇಶದ ಎಲ್ಲ ಕೈಗಾರಿಕೆಗಳಲ್ಲಿ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.




