ವಿ.ಬಿ.ಜಿ ರಾಮ್ ಜಿ ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಖಂಡನೀಯ. ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದರೂ ಅಧಿಕಾರಿಗಳು ಫಲಾನುಭವಿಗಳಿಗೆ ತಲುಪಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮದನಹಳ್ಳಿ ಮಹೇಶ್ ಆರೋಪಿಸಿದ್ದಾರೆ
ಈ ಕುರಿತು ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ ಅವರು ಅವರು ವಿಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡವರು, ಕೃಷಿ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು ಸೇರಿದಂತೆ ಕೂಲಿಕಾರ್ಮಿಕರು ವಲಸೆ ಹೋಗದಂತೆ ತಡೆಯುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಕೆಲಸ ಮಾಡಿದ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಹಣ ದೊರೆಯದಿದ್ದರೆ ಅವರ ಕುಟುಂಬಗಳ ಜೀವನ ನಿರ್ವಹಣೆಗೆ ತೊಂದರೆಯಾಗುತ್ತದೆ. ಕೂಲಿ ಹಣವನ್ನೇ ನಂಬಿ ಜೀವನ ಸಾಗಿಸುವ ಬಡ ಕಾರ್ಮಿಕರು ಸಾಲ ಮಾಡಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆಯ ಆರು ತಾಲೂಕುಗಳು ಬರಪೀಡಿತ ಪಟ್ಟಿಯಲ್ಲಿ ಘೋಷಣೆ ಆಗಿದ್ದರೂ ಸಹ ಕೂಲಿ ಹಣ ಪಾವತಿಗೆ ಅಧಿಕಾರಿಗಳು ಹೆಚ್ಚು ಒತ್ತು ನೀಡುತ್ತಿಲ್ಲ ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ಅವಕಾಶಗಳನ್ನು ನೀಡಲು ಅಸಕ್ತಿ ವಹಿಸುತ್ತಿಲ್ಲ ಹಣ ಪಾವತಿಗೂ ಸಹ ಅಧಿಕಾರಿಗಳು ಹಣದ ಬೇಡಿಕೆ ಇಟ್ಟಿದ್ದಾರೆ ಜಿಲ್ಲೆಯಾದ್ಯಂತ ಕಾಮಗಾರಿಗಳಲ್ಲಿ ಕೂಲಿ ನಿರ್ವಹಿಸಿದ ಕಾರ್ಮಿಕರಿಗೆ ಸುಮಾರು 60 ಲಕ್ಷ ಹಣ ಬಾಕಿ ಉಳಿದಿದ್ದು ಕೂಡಲೇ ಪಾವತಿ ಮಾಡುವಂತೆ ಒತ್ತಾಯ ಮಾಡಿದರು.
ಯೋಜನೆಯ ನಿಯಮದಂತೆ ಕೆಲಸದ ಮಸ್ಟರ್ ರೋಲ್ ಮುಕ್ತಾಯವಾದ 15 ದಿನಗಳೊಳಗೆ ಕೂಲಿ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ವಿಳಂಬವಾದ ಪ್ರತಿ ದಿನಕ್ಕೆ ಬಾಕಿ ಕೂಲಿ ಮೊತ್ತದ ಶೇ.0.05ರಷ್ಟು ಪರಿಹಾರ ನೀಡಲು ಅವಕಾಶವಿದೆ. ಈ ನಿಯಮವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಕೂಲಿ ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಕಾಲದಲ್ಲಿ ದೊರೆಯುವುದು ಅವರ ಹಕ್ಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಬಾಕಿ ಇರುವ ಕೂಲಿ ಹಣ ಪಾವತಿ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಮದನಹಳ್ಳಿ ಮಹೇಶ್ ಎಚ್ಚರಿಸಿದ್ದಾರೆ.



