ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸದೆ ಕೆಲಸ ಮಾಡಿಕೊಡಬೇಕು. ಎರಡು ತಿಂಗಳೊಳಗೆ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆ ಕೇವಲ ಠಾಣೆಗಳಿಗೆ ಸೀಮಿತವಾಗಬಾರದು. ಪೊಲೀಸರು ನಿರಂತರವಾಗಿ ಗಸ್ತು ತಿರುಗಬೇಕು. ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಇದೆ ಎಂಬ ಭರವಸೆ ಮೂಡಬೇಕು. ಗಾಂಜಾ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಅಪರಾಧಿಗಳಿಗೆ ಕಾನೂನಿನ ಭಯ ಮೂಡಿಸಬೇಕು ಎಂದು ಸೂಚಿಸಿದರು.
ಪಡಿತರ ಚೀಟಿ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಡವರನ್ನು ಕಚೇರಿಗಳಿಗೆ ಅಲೆದಾಡಿಸಬಾರದು. ಅರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ಅನಗತ್ಯವಾಗಿ ರದ್ದುಗೊಳಿಸದೆ, ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದರು.
ಎಪಿಎಂಸಿ ಜಾಗಕ್ಕೆ ಸಂಬಂಧಿಸಿದ ಕಡತ ಎಲ್ಲಿದೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು. ಕಂದಾಯ ಇಲಾಖೆಗೆ ಸೇರಿದ ಜಾಗದ ವಿಚಾರದಲ್ಲಿ ಅರಣ್ಯ ಇಲಾಖೆಗೆ ಪತ್ರ ಬರೆಯುವ ಅಗತ್ಯವೇನು ಎಂದು ಪ್ರಶ್ನಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಬೋರ್‌ವೆಲ್ ಹಾಗೂ ನೀರಾವರಿ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಪಡಿತರ ವಿತರಣಾ ಕೇಂದ್ರಗಳಿಗೆ ಜಿಪಿಎಸ್ ವ್ಯವಸ್ಥೆಯಿಂದ ಮೂರು-ನಾಲ್ಕು ಕಿ.ಮೀ. ದೂರದಿಂದ ಬರುವ ಜನರಿಗೆ ತೊಂದರೆಯಾಗುತ್ತಿದೆ. ಆಹಾರ ಇಲಾಖೆ ವಾಹನ ವ್ಯವಸ್ಥೆ ಕಲ್ಪಿಸಿ ಫಲಾನುಭವಿಗಳನ್ನು ಕರೆತರುವ ಮತ್ತು ವಾಪಸ್ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು
ಶಾಲೆಗಳಲ್ಲಿ ಸಮಿತಿಗಳ ಮೂಲಕ ಜಾಗೃತಿ ಮೂಡಿಸಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಶಾಲೆಗಳನ್ನು ಮುಚ್ಚಿದರೆ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಊಟ ನೀಡುವ ಬಗ್ಗೆ ಅಧಿಕಾರಿಗಳು ಗುತ್ತಿಗೆದಾರರ ಮೇಲೆ ನಿಗಾ ವಹಿಸಬೇಕು. ಕೋವಿಡ್ ಪೂರ್ವದಲ್ಲಿದ್ದಂತೆ ಪ್ರತಿ ಹಳ್ಳಿಗೂ ಬಸ್ ಸೌಲಭ್ಯ ಕಲ್ಪಿಸಬೇಕು. ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳು ನಿಖರ ಮಾಹಿತಿ ನೀಡಿದರೆ ವಿಧಾನಸೌಧದಲ್ಲಿ ಸಂಬಂಧಪಟ್ಟ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಸಭೆಯಲ್ಲಿ ಎಂಎಲ್ಸಿ ಅನಿಲ್ ಕುಮಾರ್, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮದ್ ಹನೀಫ್, ತಾಪಂ ಇಒ ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




