ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಒದಗಿಸಲಾಗುತ್ತಿರುವ ವಿವಿಧ ಸವಲತ್ತುಗಳು ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2,29,492 ಅಲ್ಪಸಂಖ್ಯಾತ ಜನಸಂಖ್ಯೆ ಇದ್ದು, ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪುವಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಶಿಕ್ಷಣಕ್ಕೆ ಆದ್ಯತೆ ಕೋಲಾರ, ಬಂಗಾರಪೇಟೆ, ಮುಳಬಾಗಿಲು, ಮಾಲೂರು ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪೆಮ್ಮಶೆಟ್ಟಿಹಳ್ಳಿ ಬಳಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡದ ಉದ್ಘಾಟನೆ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಶಾಲೆಗಳನ್ನು ಸ್ವಂತ ಕಟ್ಟಡಗಳಿಗೆ ಶೀಘ್ರ ಸ್ಥಳಾಂತರಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲೆಯಲ್ಲಿ 5 ಬಾಲಕರ ಹಾಗೂ 3 ಬಾಲಕಿಯರ ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
ವಿದ್ಯಾರ್ಥಿವೇತನ, ಸಾಲ ಸೌಲಭ್ಯಕ್ಕೆ ಅರಿವು
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಉನ್ನತ ವ್ಯಾಸಂಗಕ್ಕಾಗಿ ನೀಡಲಾಗುವ ‘ಅರಿವು’ ಶಿಕ್ಷಣ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ ನೀಡಲಾಗುವ ಸಬ್ಸಿಡಿ ಸಾಲ ಸೌಲಭ್ಯಗಳಾದ ಟ್ಯಾಕ್ಸಿ ಮತ್ತು ಗೂಡ್ಸ್ ವಾಹನ ಯೋಜನೆಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ಸರ್ಕಾರದ ವಿವಿಧ ಯೋಜನೆಗಳ ಕುರಿತು ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸಿ, ಅರ್ಹ ಫಲಾನುಭವಿಗಳು ಯೋಜನೆಗಳ ಪ್ರಯೋಜನ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಶಾದಿ ಮಹಲ್, ಸ್ಮಶಾನಗಳ ರಕ್ಷಣೆಗೆ ಸೂಚನೆ
ಜಿಲ್ಲೆಯಲ್ಲಿ ನಡೆಯುತ್ತಿರುವ ಶಾದಿ ಮಹಲ್ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು, ಸ್ಮಶಾನ ಹಾಗೂ ಈದ್ಗಾ ಮೈದಾನಗಳ ಒತ್ತುವರಿ ತೆರವುಗೊಳಿಸುವುದು ಮತ್ತು ಅವುಗಳಿಗೆ ರಕ್ಷಣಾತ್ಮಕವಾಗಿ ಕಾಂಪೌಂಡ್ ನಿರ್ಮಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಭೂಮಿ ಮಂಜೂರಾತಿ ಹಾಗೂ ಅಸ್ತಿತ್ವದಲ್ಲಿರುವ ವಕ್ಫ್ ಆಸ್ತಿಗಳ ರಕ್ಷಣೆಗೆ ಸಂಬಂಧಿಸಿದಂತೆ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ ಸೂಚಿಸಿದರು.
ಯುವಕರಲ್ಲಿ ಜಾಗೃತಿಗೆ ಕ್ರಮ
ಇತ್ತೀಚಿನ ದಿನಗಳಲ್ಲಿ ಯುವಕರು ‘ವೀಲಿಂಗ್’ನಂತಹ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗುತ್ತಿರುವುದು ಹಾಗೂ ಮಾದಕ ವ್ಯಸನ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಸಭೆಯಲ್ಲಿ ಕಳವಳ ವ್ಯಕ್ತವಾಯಿತು. ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಶಾಂತಿ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸುವ ಕುರಿತು ತೀರ್ಮಾನಿಸಲಾಯಿತು.
ಸದಸ್ಯರಿಂದ ಸಮಸ್ಯೆಗಳ ಪ್ರಸ್ತಾಪ
ಸಭೆಯಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ನಾಮನಿರ್ದೇಶಿತ ಸದಸ್ಯರಾದ ಶಬ್ಬೀರ್ ಅಹ್ಮದ್ ಪಾಷಾ ಹಾಗೂ ಮಹಬೂಬ್ ಪಾಷಾ ಅವರು ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ವಿವಿಧ ಪ್ರಮುಖ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದರು.
ಇದನ್ನು ಓದಿದ್ದೀರಾ..? ಕೋಲಾರ | ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಸಕ ಕೊತ್ತೂರು ಮಂಜುನಾಥ್ ನೆರವು
ಸಭೆಯಲ್ಲಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಯೋಜನಾ ನಿರ್ದೇಶಕಿ ಅಂಬಿಕಾ, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕಿ ಶೆರಿನ್ ತಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಮಂಜುಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒಗಳು), ತಾಲೂಕು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಲಾರ | ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹರಿಗೆ ತಲುಪಲಿ : ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ
ಪೋಸ್ಟ್ ಹಂಚಿಕೊಳ್ಳಿ:





