ಜಿಲ್ಲೆಯಲ್ಲಿ ಕೊಳವೆಬಾವಿಗಳನ್ನು ಕೊರೆಯುವ ಮೊದಲು ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆ ಉದ್ದೇಶಿಸಿ ಮಾತನಾಡಿದರು. “ಯಾವುದೇ ಹರಿಯುವ ನೀರಿನ ಮೂಲಗಳು ಇಲ್ಲದಿರುವ ಕಾರಣ ನೀರಿನ ಬಳಕೆಗೆ ಅಂತರ್ಜಲ ಹಾಗೂ ಕೆರೆಗಳನ್ನು ಅವಲಂಬಿಸಬೇಕಾಗಿದೆ. ಆದ್ದರಿಂದ ಅಂತರ್ಜಲ ಮರುಪೂರಣ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು. ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಪ್ರಕ್ರಿಯೆಯನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.
“ಅಗತ್ಯವಾಗಿರುವ ಸ್ಥಳಗಳಲ್ಲಿ ಅನಿವಾರ್ಯವಾದಾಗ ಮಾತ್ರ ಕೊಳವೆಬಾವಿ ಕೊರೆಯಬೇಕು. ಸಾಧ್ಯವಾದಷ್ಟು ಮಳೆ ನೀರನ್ನು ಅವಲಂಬಿಸಿ ಮಳೆ ನೀರು ಕೊಯ್ಲು ಪದ್ಧತಿ ಮುಂತಾದ ವೈಜ್ಞಾನಿಕ ವಿಧಾನಗಳಿಂದ ನೀರು ಸಂಗ್ರಹ ಮಾಡಬೇಕು. ಉಳಿದಂತೆ ಪ್ರಸ್ತುತ ಎಲ್ಲ ಕೆರೆಗಳಿಗೆ ಕೆ ಸಿ ವ್ಯಾಲಿ ನೀರನ್ನು ಹರಿಸಲಾಗುತ್ತದೆ. ಇದರಿಂದ ಅಂತರ್ಜಲ ಮರುಪೂರಣ ಕ್ರಿಯೆಗೆ ಒತ್ತು ನೀಡಲಾಗುತ್ತಿದೆ” ಎಂದು ತಿಳಿಸಿದರು.
‘ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಿಂದ ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ಪ್ರಾಧಿಕಾರದಿಂದ ಅನುಮತಿ ನೀಡಲಾಗಿದೆ. ಇನ್ನು ಮುಂದೆ ಕೊಳವೆಬಾವಿಗಳನ್ನು ಕೊರೆಯುವಾಗ ಪ್ರಾಧಿಕಾರದ ಅನುಮತಿ ಪಡೆಯಬೇಕು” ಎಂದು ನಿರ್ದೇಶಿಸಿದರು.
ಈ ಸುದ್ದಿ ಓದಿದ್ದೀರಾ? ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಚಿವ ಕೆ ಎಚ್ ಮುನಿಯಪ್ಪ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಹಿರಿಯ ಭೂವಿಜ್ಞಾನಿ ತಿಪ್ಪೇಸ್ವಾಮಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಇದ್ದರು.