ಅಂಬೇಡ್ಕರ್ ಪುತ್ಥಳಿ ನಿರ್ಮಾಣ ವಿಚಾರದಲ್ಲಿ ಯಾರ ವೈಯಕ್ತಿಕ ಪ್ರತಿಷ್ಠೆಗೂ ಮನ್ನಣೆ ನೀಡದೆ, ಸಂವಿಧಾನ ಶಿಲ್ಪಿಗೆ ಸಲ್ಲಿಸುವ ಗೌರವ ಹಾಗೂ ಪುತ್ಥಳಿಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲಾಡಳಿತ ಕಾನೂನು ನಿಯಮಗಳ ಮಿತಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಸೂಕ್ತ ಸ್ಥಳ ಗುರುತಿಸಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಿದ್ದು, ಎಲ್ಲರೂ ಜಿಲ್ಲಾಡಳಿತದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಯಾವುದೇ ಜಾತಿ, ಸಮುದಾಯಕ್ಕೆ ಸೀಮಿತರಲ್ಲ. ಇಡೀ ವಿಶ್ವದ ಆಸ್ತಿಯಾಗಿದ್ದಾರೆ ನಾವುಗಳು ತಂದೆ-ತಾಯಿಗಳಿಗೆ ನೀಡುವ ಗೌರವಕ್ಕಿಂತ ಮೂರು ಪಟ್ಟು ಹೆಚ್ಚಿನ ಗೌರವವನ್ನು ಅಂಬೇಡ್ಕರ್ ಅವರಿಗೆ ಸಲ್ಲಿಸಬೇಕು. ಅವರು ನೀಡಿದ ಸಂವಿಧಾನದಿಂದಲೇ ನಾವೆಲ್ಲರೂ ಸ್ವತಂತ್ರವಾಗಿ ಬದುಕಲು ಸಾಧ್ಯವಾಗಿದೆ ಆದ್ದರಿಂದ ಪುತ್ಥಳಿ ಸ್ಥಾಪನೆ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸದೆ ಗ್ರಾಮದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಹೋಗಬೇಕಾಗಿದೆ ಎಂದರು.
ಪುತ್ಥಳಿ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ತಾವು ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಭರಿಸಲಿದ್ದಾರೆ. ಸರ್ಕಾರಿ ಅಥವಾ ಗ್ರಾಮ ಪಂಚಾಯಿತಿಗೆ ಸೇರಿದ ಸೂಕ್ತ ಜಾಗ ದೊರೆತರೆ ಅಲ್ಲಿ ಅಂಬೇಡ್ಕರ್ ಭವನ ನಿರ್ಮಿಸಿಕೊಡಲು ಸಹ ಸಿದ್ಧರಿದ್ದು ಅದರ ಜೊತೆಗೆ ಪುತ್ಥಳಿ ಸಹ ನಿರ್ಮಾಣ ಮಾಡಲು ಸಿದ್ದವಿದ್ದು ಇದು ಗ್ರಾಮಸ್ಥರ ಶುಭಕಾರ್ಯಗಳಿಗೂ ಅಂಬೇಡ್ಕರ್ ಭವನ ಅನುಕೂಲವಾಗಲಿದೆ ಎಂದರು
ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಸಾರ್ವಜನಿಕ ರಸ್ತೆ, ಚರಂಡಿ, ವಿದ್ಯುತ್ ಪರಿವರ್ತಕಗಳ ಸಮೀಪ ಅಥವಾ ವಿವಾದಿತ ಸ್ಥಳಗಳಲ್ಲಿ ಪುತ್ಥಳಿ ನಿರ್ಮಿಸಲು ಅವಕಾಶವಿಲ್ಲ. ಕಾನೂನು ಮಾರ್ಗಸೂಚಿಗಳ ಪ್ರಕಾರ ಪುತ್ಥಳಿಯ ಗೌರವ, ಸುರಕ್ಷತೆ ಮತ್ತು ಸಂರಕ್ಷಣೆಗೆ ಸೂಕ್ತವಾದ ಸ್ಥಳವನ್ನು ಗುರುತಿಸಲಾಗುವುದು ಎಂದರು.
ಇವತ್ತೇ ಅಪರ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ ಇಒ ಹಾಗೂ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿದೆ. ಅದರ ಆಧಾರದ ಮೇಲೆ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಎಂ.ಎಲ್. ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ. ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ ಜಿಪಂ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಉಪವಿಭಾಗಾಧಿಕಾರಿ ಡಾ. ಎಂ. ನಯನ, ಡಿವೈಎಸ್‌ಪಿ ವಸಂತ್ ಕುಮಾರ್, ತಾಪಂ ಇಒ ಮಂಜುನಾಥ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವಿವಿಧ ಸಂಘಟನೆಗಳ ಮುಖಂಡರಾದ ಎನ್. ಅಂಬರೀಶ್, ಮೇಡಹಾಳ ಮುನಿಅಂಜಿನಪ್ಪ, ಡಿಪಿಎಸ್ ಮುನಿರಾಜು, ಕುಡುವನಹಳ್ಳಿ ಆನಂದ್, ವಿಜಯಲಕ್ಷ್ಮಿ, ಶಾಂತಮ್ಮ ಹುಲ್ಲಂಕಲ್ಲು ಗ್ರಾಮದ ಹಿರಿಯ ಮುಖಂಡ ಈರಣ್ಣ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.



