ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಗ್ಗೆ ನಡೆಯಲಿರುವ ‘ಪ್ರಜಾ ಆಂದೋಲನ’ ಕಾರ್ಯಕ್ರಮದಲ್ಲಿ ಸಾರ್ವಜನಿಕರ ನೂರಾರು ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್. ಅಂಬರೀಷ್ ತಿಳಿಸಿದರು.
ನಗರದಲ್ಲಿ ನಡೆಯಲಿರುವ ಕಾರ್ಯಕ್ರಮ ವೇದಿಕೆ ಬಳಿ ಮಾತನಾಡಿದ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಕೊತ್ತೂರು ಜಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಕ್ಷಾತೀತವಾಗಿ ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಸದಾ ಜನರೊಂದಿಗೆ ಇದ್ದು, ಈ ಹಿಂದೆ ನಡೆದ ಜನಸ್ಪಂದನ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಜನಪರ ಕಾರ್ಯಕ್ರಮಗಳ ಮೂಲಕ ಸಮಸ್ಯೆಗಳಿಗೆ ಸ್ಪಂದಿಸುವ ಪರಂಪರೆಯನ್ನು ದೇವರಾಜ ಅರಸು ಅವರ ಕಾಲದಲ್ಲಿಯೇ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕಾಣಬಹುದಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ 10ರಿಂದ 15 ಕೌಂಟರ್‌ಗಳನ್ನು ತೆರೆಯಲಾಗಿದೆ. ಕೋಲಾರ ವಿಧಾನಸಭಾ ಕ್ಷೇತ್ರದ 23 ಗ್ರಾಮ ಪಂಚಾಯಿತಿಗಳು ಹಾಗೂ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಬಹುದು ಎಂದರು.
ಒಟ್ಟು 38 ಇಲಾಖೆಗಳ ಸಮಸ್ಯೆಗಳಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ವಿವಿಧ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸಮಸ್ಯೆಗಳನ್ನು ಒಂದು ವಾರದೊಳಗೆ ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ. ಪ್ರತಿ ಮೂರನೇ ಶನಿವಾರ ಹೋಬಳಿ ಮಟ್ಟದಲ್ಲಿ ಹಾಗೂ ನಾಲ್ಕು ಹೋಬಳಿಗಳ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಸಾರ್ವಜನಿಕರಿಗೆ ಅಗತ್ಯ ಸಹಕಾರ ನೀಡಬೇಕು ಹಾಗೂ ಸರ್ಕಾರದ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಇದನ್ನು ಓದಿದ್ದೀರಾ..?ಶ್ರೀನಿವಾಸಪುರ | ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಖಾದ್ರಿಪುರ ಬಾಬು, ಷಂಷೀರ್, ಚಿಟ್ಟಿ, ಗೋವಿಂದರಾಜು, ಕುಡುವನಹಳ್ಳಿ ಆನಂದ್, ವಿಜಯನಗರ ಮಂಜುನಾಥ್, ಹಾರೋಹಳ್ಳಿ ರಾಜೇಶ್, ರಾಜಕಲ್ಲಹಳ್ಳಿ ಶ್ರೀನಿವಾಸ್, ರಘುನಾಥ್, ವೀರೇಂದ್ರ ಪಾಟೀಲ್, ಲೋಕೇಶ್, ಟೈಲರ್ ಶಿವಕುಮಾರ್, ಬಾಬರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





