ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಕಾಲೇಜು ಆವರಣದಲ್ಲಿ ‘ಯುವ ಸೌರಭ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಯುವಕರಿಗೆ ಓದಿನ ಜೊತೆಗೆ ಮನರಂಜನೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯವಾಗಿವೆ. ಹಿಂದಿನ ಕಾಲದ ಕಲೆ, ಸಂಸ್ಕೃತಿಯನ್ನು ಮೆಲುಕು ಹಾಕಿ, ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಜಿಲ್ಲೆಯ ಎಲ್ಲ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಖುಷಿ ನೀಡುವ ಹಾಗೂ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಶಾಸಕ ಕೊತ್ತೂರು ಮಂಜುನಾಥ್ ಅವರು ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ₹103 ಕೋಟಿ ಅನುದಾನ ನೀಡಿದ್ದು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಈ ಕಾಲೇಜಿನಲ್ಲಿ ಶಾಸಕರ ಅನುದಾನದಿಂದ ₹75 ಲಕ್ಷ ವೆಚ್ಚದಲ್ಲಿ ಮೂರು ಕೊಠಡಿಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ಸಿಎಸ್ಆರ್ ಅನುದಾನದ ಮೂಲಕ ಸಭಾಂಗಣದಲ್ಲಿ ಸೀಟ್ ವ್ಯವಸ್ಥೆ ಮಾಡಲಾಗಿದೆ. ಶಾಸಕರ ಸಂಬಳದ ಹಣವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿದ್ದು, ತಮ್ಮ ವೈಯಕ್ತಿಕ ಬಳಕೆಗೆ ಬಳಸುವುದಿಲ್ಲ ಎಂದು ತಿಳಿಸಿದರು. ಎಲ್ಲ ಜನಾಂಗದವರಿಗೂ ಅನುಕೂಲವಾಗುವಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಲಿದ್ದು, ಇದರಿಂದ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಕಲೆ ಅಡಗಿರುತ್ತದೆ. ಅವರಿಗೆ ಸೂಕ್ತ ವೇದಿಕೆ ದೊರೆತಾಗ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ಪ್ರತಿ ಶುಕ್ರವಾರ ಕೋಲಾರಮ್ಮ ದೇವಾಲಯದ ಬಳಿ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮ ನಡೆಯುತ್ತಿದ್ದು, ಅದೇ ಮಾದರಿಯಲ್ಲಿ ಮಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಇದನ್ನು ಓದಿದ್ದೀರಾ..? ಕೋಲಾರ | ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಕ್ರಷರ್: ಕ್ರಮಕ್ಕೆ ಶಾಸಕ, ಎಂಎಲ್‌ಸಿಗೆ ಮನವಿ
ಕಾಲೇಜಿನ ಪ್ರಾಂಶುಪಾಲ ಪರಶುರಾಮ್ ನಗರಸಭೆ ಮಾಜಿ ಸದಸ್ಯರಾದ ಸೈಯದ್ ಆಫ್ಸರ್, ಅಮರನಾಥ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.




