ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಒಟ್ಟು 17 ಸ್ಥಾನದ ಕೊಲ್ಹಾರ ಪಟ್ಟಣ ಪಂಚಾಯಿತಿಯಲ್ಲಿ 14 ಸದಸ್ಯ ಬಲ ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಬಹುವರ್ಷಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷಗಿರಿ ಒಲಿದಿವೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಸ್ಥಳೀಯ ಸಂಸ್ಥೆಗಳಿಗೆ ಸದಸ್ಯರ ಚುನಾಯಿತರಾಗಿ ಎರಡೂವರೆ ವರ್ಷಗಳು ಗತಿಸಿದರೂ ಉಪಾಧ್ಯಕ್ಷರು ಅಧ್ಯಕ್ಷರು ಆಯ್ಕೆಯಾಗದೇ ಮೀಸಲಾತಿ ಘೋಷಣೆಗೆ ಸದಸ್ಯರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕಳೆದ ವಾರ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ. ಇದರಲ್ಲಿ ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲು ನಿಗದಿಯಾಗಿದೆ.
ಕೊಲ್ಹಾರ ಪಟ್ಟಣ ಪಂಚಾಯಿತ್‌ನ ಸದಸ್ಯರಲ್ಲಿ ಕಾಂಗ್ರೆಸ್ 11, ಬಿಜೆಪಿ 3, ಎಐಎಂಐಎಂ 2 ಹಾಗೂ ಪಕ್ಷೇತರದಿಂದ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು 17 ಮಂದಿ ಚುನಾಯಿತರಾಗಿದ್ದರು. ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಎಐಎಂಐಎಂನ ಇಬ್ಬರು ಹಾಗೂ ಪಕ್ಷೇತರ ಸದಸ್ಯರು ಅಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಬೆಂಬಲ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ನ ಒಟ್ಟು 14 ಮಂದಿ ಸದಸ್ಯಬಲ ಹೊಂದಿದೆ. ಸಹಜವಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗರಿಗೆದರಿದೆ.
ಕೊಲ್ಹಾರ ಪಟ್ಟಣ ಪಂಚಾಯತ್ ಕಚೇರಿ ಮಿಸಲಾತಿ ಪ್ರಕಟಿಸಿದೆ. ಇದರಲ್ಲಿ ಕೊಲ್ಹಾರ ಪಟ್ಟಣ ಪಂಚಾಯಿತ್ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗದ ಮಹಿಳೆಗೆ ಮೀಸಲು ನಿಗದಿಯಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪಕ್ಷೇತರ ಸದಸ್ಯ ಸೇರಿ, ಹಲವು ಪ್ರಮುಖ ಕಾಂಗ್ರೆಸ್ ಸದಸ್ಯರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇನ್ನು ಸಾಮಾನ್ಯ ವರ್ಗ ಮಹಿಳಾ ಸ್ಥಾನಕ್ಕೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಇರುವ ಎಲ್ಲ ಏಳು ಮಹಿಳಾ ಸದಸ್ಯರು ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ಎರಡೂ ಸ್ಥಾನಗಳಿಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸ್ಥಳೀಯ ಶಾಸಕ ಹಾಗೂ ಸಚಿವ ಶಿವಾನಂದ ಪಾಟೀಲರು ಮಾಡುವ ಆಯ್ಕೆಯ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಸದಸ್ಯರು ಒಮ್ಮತ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ
“ಯಾರೇ ಅಧ್ಯಕ್ಷ, ಉಪಾಧ್ಯಕ್ಷರಾದರೂ ಕೊಲ್ಹಾರ ಪುನರ್ವಸತಿ ಕೇಂದ್ರದಲ್ಲಿನ ಮೂಲಸೌಲಭ್ಯ ಕೊರತೆಗಳು ಸೇರಿದಂತೆ ನಾನಾ ಸಮಸ್ಯೆಗಳನ್ನು ಸರಿಪಡಿಸಿ, ಸ್ಥಳೀಯ ಸಂತ್ರಸ್ತರ ಸಮಸ್ಯೆಗಳಿಗೆ ಮುಕ್ತಿ ನೀಡುವ ಕಾರ್ಯಕ್ಕೆ ಮುಂದಾಗಬೇಕು” ಎಂಬುದು ಜನರ ಒತ್ತಾಯವಾಗಿದೆ.