ʼಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆ’ ಕಾರ್ಯಕ್ರಮದ ಮೂಲಕ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮೀಣ ಮತ್ತು ಹೋಬಳಿ ಹಂತದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳಡಿ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು” ಎಂದು ಹೇಳಿದರು.
“ಈ ಹಿನ್ನೆಲೆಯಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಇರುವ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಹಂತದಲ್ಲಿ ಫಲಾನುಭವಿಗಳ ಜತೆಗೆ ಸಮಾಲೋಚನೆ ಮಾಡಿ, ಅವರಿಗಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಸ್ಥಳೀಯ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.
“ಡ್ಯಾಶ್ ಬೋರ್ಡ್ ಸಮಸ್ಯೆಯಿಂದಾಗಿ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕುರಿತು ನಿಖರವಾದ ಮಾಹಿತಿ ದೊರೆಯುತ್ತಿಲ್ಲ. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು. ಗೃಹಲಕ್ಷ್ಮೀ ಯೋಜನೆಯ ಮೂಲಕ 2024ರ ಡಿಸೆಂಬರ್ ಮಾಹೆಯವರೆಗೆ 3 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಒಟ್ಟು 1030 ಕೋಟಿ 27 ಲಕ್ಷದ 78 ಸಾವಿರ ರೂಪಾಯಿಯನ್ನು ಮಹಿಳೆಯರಿಗೆ ಡಿಬಿಟಿ ಮೂಲಕ ನೇರವಾಗಿ ಪಾವತಿಸಲಾಗಿದೆ. ಈ ಯೋಜನೆಯಡಿ 2025ರ ಫೆಬ್ರವರಿಯಲ್ಲಿ 598ಕ್ಕಿಂತ ಹೆಚ್ಚು ನೋಂದಣಿಯಾಗಿದೆ.
“ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಹಾಗಾಗಿ ಅಕ್ರಮ ಅಕ್ಕಿ ಸಾಗಾಣಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮಾರಾಟ ಮಾಡಿದರೆ, ಅಂತಹ ಫಲಾನುಭವಿಗಳ ಪಡಿತರ ಚೀಟಿಯನ್ನು ರದ್ದುಪಡಿಸಲು ಅವಕಾಶವಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ₹10 ಕೋಟಿ ಅನುದಾನ ನೀಡಿದ್ದಾರೆ. ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ವಹಿಸಬೇಕು” ಎಂದರು.
ಐದು ಗ್ಯಾರಂಟಿ ಯೋಜನೆಗಳ ಪ್ರಗತಿ:
“ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,13,663 ಫಲಾನುಭವಿಗಳಿಗೆ ಡಿಸೆಂಬರ್-2024ರ ಅಂತ್ಯದವರೆಗೆ ಡಿಬಿಟಿ ಮೂಲಕ 1030.27 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಫೆಬ್ರವರಿ-2025ರ ಅಂತ್ಯದವರೆಗೆ 2,77,392 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 219.25 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಅನ್ನಾಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಿಗೆ ಡಿಸೆಂಬರ್-2024ರ ಅಂತ್ಯದವರೆಗೆ 2,99,213 ಕಾರ್ಡುದಾರರಿಗೆ 18,39,92,530 ರೂ.ಗಳ ವೆಚ್ಚ ಭರಿಸಲಾಗಿರುತ್ತದೆ” ಎಂದು ಹೇಳಿದರು.
“ಶಕ್ತಿಯೋಜನೆಯಡಿ ಫೆಬ್ರವರಿ-2025ರ ಅಂತ್ಯದವರೆಗೆ 6 ಕೋಟಿ 70 ಲಕ್ಷದ 2 ಸಾವಿರ 872 ಮಹಿಳೆಯರು ಕಲ್ಯಾಣ ಕರ್ನಾಟ ರಸ್ತೆ ಸಾರಿಗೆ ಸಂಸ್ಥೆಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 2,35,51,247 ರೂ.ಗಳು ಖರ್ಚಾಗಿದೆ. ಯುವನಿಧಿ ಯೋಜನೆಯಡಿ ಈವರೆಗೆ(ಮಾರ್ಚ್-2025) 8441 ನೋಂದಣಿಯಾಗಿದ್ದು, ಒಟ್ಟು ಮೊತ್ತ ₹10.05 ಕೋಟಿಗಳನ್ನು ಪಾವತಿಸಲಾಗಿರುತ್ತದೆ” ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಗುರುತಿನಿ ಚೀಟಿ ವಿತರಣೆ:
ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳಿಗೆ ಸಿಇಒ ಅವರು ಗುರುತಿನ ಚೀಟಿಗಳನ್ನು ವಿತರಣೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಹಬ್ಬದಂದೆ ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಮೃತ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಬಿ ಖಾದ್ರಿ, ನಾಗರಾಜ್ ಅರಳಿ, ಅಮರೇಶ ಎಸ್ ಗಾಂಜಿ, ಮಂಜುನಾಥ ಗೋಂಡಬಾಳ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲೂಕು ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದ್ದರು.