ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ದೇವಲಾಪುರ ಗ್ರಾಮದ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, 5 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ.
ಗ್ರಾಮದ ಕೆಲವು ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಮುಸಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂವರು, ಗಂಗಾವತಿ ಆಸ್ಪತ್ರೆಯಲ್ಲಿ ಇಬ್ಬರು ದಾಖಲಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ. “ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿರಬಹುದು” ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.
“ಗಂಗಾವತಿಯ ಆಸ್ಪತ್ರೆಯಲ್ಲಿ ಹಾಗೂ ಮುಸಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಗ್ರಾಮದ ಯುವಕರು ವೆಂಕಟೇಶ ಗೊಲ್ಲರ ಮತ್ತು ಚಿನ್ನಪ್ಪ ಹುಳ್ಳಿ ತಿಳಿಸಿದರು.
“ಆರೋಗ್ಯಾಧಿಕಾರಿಗಳು ದೇವಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, 7 ತಿಂಗಳ ಕೂಸು ಭೇದಿಯಿಂದ ಹಾಗೂ 70 ವರ್ಷದ ವೃದ್ದೆ ವಾಂತಿ ಭೇದಿಯಿಂದ ಬಳಲುತ್ತಿರುವುದು ಗೊತ್ತಾಗಿದೆ. ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳ ತಜ್ಞರಲ್ಲಿ ಕರೆದುಕೊಂಡು ಹೋಗಲು ಶಿಫಾರಸು ಮಾಡಲಾಗಿದೆ. ಬಸರಿಹಾಳ ಗ್ರಾಮದಲ್ಲಿ ತೆರೆದಿರುವ ತಾತ್ಕಾಲಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಗ್ರಾಮಸ್ಥರಿಗೆ ಸೂಚಿಸಲಾಗಿದೆ. ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ವಾಂತಿ ಭೇದಿ ಪ್ರಕರಣಗಳು ಕಂಡುಬಂದ ಕೂಡಲೇ ಚಿಕಿತ್ಸೆಗೆ ದಾಖಲಾಗಬೇಕು” ಎಂದು ಮುಸಲಾಪುರ ಆರೋಗ್ಯ ಕೇಂದ್ರದ ವೈದ್ಯೆ ಡಾ. ಸಹನಾ ತಿಳಿಸಿದರು.
“ವಾಂತಿ ಭೇದಿ ಪ್ರಕರಣಕ್ಕೆ ಖಚಿತ ಕಾರಣ ಪತ್ತೆ ಹಚ್ಚಲಾಗುತ್ತಿದೆ. ಆರೋಗ್ಯ ಇಲಾಖೆಗೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡಿದ್ದಾರೆ” ಎಂದು ಅವರು ಮಾಹಿತಿ ನೀಡಿದರು.
ಗಂಗಾವತಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಶರಣಪ್ಪ ಚಕೋಟಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.