ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಬಕ್ರೀದ್ ಹಬ್ಬದ ಶಾಂತಿ ಪಾಲನಾ ಪೂರ್ವಭಾವಿ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿದರು.
“ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುವ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಸೂಕ್ತ ಕ್ರಮವಹಿಸಲಾಗುತ್ತದೆ” ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಮಾತನಾಡಿ, “ಪ್ರತಿ ವರ್ಷದಂತೆ ಈ ವರ್ಷವೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಕೋಮು ಗಲಭೆಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಪ್ರಾಣಿಬಲಿ, ಅವುಗಳ ಸಾಗಾಟದ ಮೇಲೆ ನಿಗಾವಹಿಸಲು ಜಿಲ್ಲೆಯಲ್ಲಿ 16 ಚೆಕ್‌ಪೋಸ್ಟ್ ತೆರೆಯಲಾಗುವುದು. ಸೋಶಿಯಲ್ ಮೀಡಿಯಾದಲ್ಲಿ ಬರುವ ಯಾವುದೇ ಸುಳ್ಳು ಸುದ್ದಿಯನ್ನು ನಂಬದೆ ಅಂತಹವುಗಳನ್ನು ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಹಬ್ಬವನ್ನು ಆಚರಣೆ ಮಾಡಬೆಕು” ಎಂದು ತಿಳಿಸಿದರು.
ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಹೇಮಂತ್ ಕುಮಾರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ ಎಂ ಮಲ್ಲಯ್ಯ, ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ಮುಸ್ಲಿಂ ಸಮಾಜದ ಮುಖಂಡರಾದ ಪೀರಾ ಹುಸೇನ್ ಹೊಸಳ್ಳಿ, ಎಸ್ ಬಿ ಖಾದ್ರಿ, ಸಯ್ಯದ್ ನಾಸಿರುದ್ದೀನ್ ಹುಸೇನಿ, ಮಾನ್ವಿ ಪಾಶಾ, ಆರ್ ಮಹಮ್ಮದ್ ರಫಿ, ಮಹಮ್ಮದ್ ಸಾಬ, ಪಕೃದ್ದೀನ್, ಮರ್ದಾನ್ ಸಾಬ ಗುಡಗುಡಿ, ಮಹಮ್ಮದ್ ಸಾಬ ಕುರಗಲ್, ಬಿಜಿಲಿಸಾಬ ಪಟೇಲ್, ಉಮಾರ್ ಪಾರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.