ಗೃಹಲಕ್ಷ್ಮೀ ಫಲಾನುಭವಿಗಳಿಗೆ ಶೀಘ್ರದಲ್ಲೇ ಬಾಕಿ ಇರುವ ಕಂತುಗಳ ಹಣ ಪಾವತಿಯಾಗಲು ಕ್ರಮವಹಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಪ್ಪಳ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ನಿನ್ನೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಜತೆಗೆ ಜಿಲ್ಲೆಯು ರಾಜ್ಯದಲ್ಲಿ ಉತ್ತಮ ಸ್ಥಾನ ಪಡೆದಿದೆ. ಗೃಹಲಕ್ಷ್ಮೀ ಯೋಜನೆಯಡಿ ಬಾಕಿ ಇರುವ ಸಹಾಯ ಧನ ಮೊತ್ತವು ಸರ್ಕಾರದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಶೀಘ್ರವೇ ಜಮೆಯಾಗಲಿದ್ದು, ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ವಹಿಸಬೇಕು” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
“ಗ್ರಾಹಕರ ಸೇವಾ ಕೇಂದ್ರಗಳ ಮೂಲಕ ಗ್ರಾಮೀಣ ಭಾಗದಲ್ಲಿ ಜನರು ತಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ತೆಗೆದುಕೊಳ್ಳುತ್ತಾರೆ. ಆದರೆ, ಹಣ ತೆಗೆದುಕೊಡುವ ವೇಳೆಯಲ್ಲಿ ಜನರಿಂದ ಕಮಿಷನ್ ಪಡೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಗೃಹಲಕ್ಷ್ಮೀ ಹಣ ಪಾವತಿಗಾಗಿ ಬ್ಯಾಂಕುಗಳಲ್ಲಿನ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್‌ಗಳು ಎಲ್ಲಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಬಿಲ್ ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಮಾನ್ಯ ಜನರೊಂದಿಗೆ ಮಾನವೀಯತೆಯಿಂದ ವರ್ತಿಸುವಂತೆ ಜೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಣೆ ಮಾಡುವ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುವುದರ ಜೊತೆಗೆ ಸರಿಯಾದ ಸಮಯದಲ್ಲಿ ವಿತರಣೆ ಮಾಡಬೇಕು” ಎಂದು ತಾಕೀತು ಮಾಡಿದರು.
“ಯುವನಿಧಿ ಯೋಜನೆಯಡಿ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ನೋಂದಣಿಯಾಗಿದೆ. ಯುವಕರಿಗೂ ಸೌಲಭ್ಯಗಳು ಸಿಗಬೇಕೆಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಅರ್ಹ ಫಲಾನುಭವಿಗಳಿಗೆ ಜಾಗೃತಿ ಮೂಡಿಸಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ನೋಂದಣಿಗೆ ಕ್ರಮ ಕೈಗೊಳ್ಳಬೇಕು. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 6 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಇಲ್ಲಿಯವರೆಗೆ ಪಡೆದುಕೊಂಡಿದ್ದಾರೆ. ಕಚೇರಿ, ಶಾಲಾ-ಕಾಲೇಜುಗಳಿಗೆ ಬರುವ ಹೋಗುವ ಅವಧಿಯಲ್ಲಿ ಬಸ್ ಟ್ರಿಪ್ ಸಂಖ್ಯೆಗಳನ್ನು ಹೆಚ್ಚಿಸಿ, ಬಸ್ ನಿಲ್ದಾಣಗಳಲ್ಲಿ ಶೌಚಾಲಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅರ್ಹರಿಗೆ ಯೋಜನೆಗಳ ಲಾಭ ದೊರಕಿಸಿ, ಜಿಲ್ಲೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, “ಜನಪರವಾದ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಬದುಕು ಕಟ್ಟಿಕೊಂಡು, ಇತರರಿಗೆ ಮಾದರಿಯಾದ ಫಲಾನುಭವಿಗಳ ಯಶೋಗಾಥೆಗಳ ಮಾಹಿತಿ ಸಲ್ಲಿಸಬೇಕು” ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ ಮಾತನಾಡಿ, “ಕೊಪ್ಪಳ ಕೇಂದ್ರ ಬಸ್‌ನಿಲ್ದಾಣದಲ್ಲಿರುವ ಶೌಚಾಲಯಗಳು ಸಾರ್ವಜನಿಕರ ಉಪಯೋಗಕ್ಕೆ ಯೋಗ್ಯವಿಲ್ಲ. ಅವುಗಳ ಸ್ವಚ್ಛತೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಯುವನಿಧಿ ಯೋಜನೆಯಡಿ ಪದವಿ ಹಾಗೂ ಡಿಪ್ಲಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳ ಮಾಹಿತಿ ಪಡೆದು ಅವರನ್ನು ಯೋಜನೆಯಡಿ ನೋಂದಾಯಿಸಬೇಕು. ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುನ್ನಾ ಜಿಲ್ಲಾ ಮತ್ತು ಆಯಾ ತಾಲೂಕಿನ ಗ್ಯಾರಂಟಿ ಸಮಿತಿಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಟಿ ಖಾದ್ರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲೂಕು ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
