ಡೆಂಘೀ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ಮುಸಲಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇಂಗಳದಾಳ್ ಗ್ರಾಮದಲ್ಲಿ “ಡೆಂಘೀ ವಿರೋಧಿ ಮಾಸಾಚರಣೆ” ಕಾರ್ಯಕ್ರಮ ನಡೆಯಿತು.
ಕೊಪ್ಪಳದ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ ಮಾತನಾಡಿ, “ಡೆಂಘೀ ರೋಗವು ಈಡಿಸ್ ಜಾತಿಯ ಸೋಂಕಿತ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ರೋಗದ ಮುಖ್ಯ ಲಕ್ಷಣಗಳಾದ ವಿಪರೀತ ಜ್ವರ, ತಲೆನೋವು, ವಾಂತಿ ಹಾಗೂ ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಳಿ ಆಕಾರದ ಕೆಂಪು ಗಂಧೆಗಳು, ಕಪ್ಪು ಮಲವಿಸರ್ಜನೆ ಹಾಗೂ ವಸಡುಗಳಲ್ಲಿ ರಕ್ತಸ್ರಾವ—ಈ ರೀತಿಯ ಲಕ್ಷಣಗಳು ಕಂಡುಬಂದಲ್ಲಿ ಯಾವುದೇ ಕಾರಣಕ್ಕೂ ಜ್ವರವನ್ನು ನಿರ್ಲಕ್ಷಿಸದೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಅಥವಾ ಆರೋಗ್ಯ ಸಿಬ್ಬಂದಿಯನ್ನು ಸಂಪರ್ಕಿಸಬೇಕು” ಎಂದು ಸಲಹೆ ನೀಡಿದರು.
ಶಾಲೆ ಮತ್ತು ಮನೆಗಳಲ್ಲಿ ನೀರು ಶೇಖರಿಸುವ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ ಹಾಗೂ ಕಲ್ಲಿನ ದೋಣಿಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಛವಾಗಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ ನಂತರ ನೀರು ತುಂಬಬೇಕು. ನೀರಿನ ಪಾತ್ರೆಗಳನ್ನು ಮುಚ್ಚಳದಿಂದ ಭದ್ರವಾಗಿ ಮುಚ್ಚಬೇಕು. ಸಾಯಂಕಾಲದ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕುವುದು ಹಾಗೂ ವೈಯಕ್ತಿಕ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ಮನೆಯ ಸುತ್ತಮುತ್ತ ಹಾಗೂ ಛಾವಣಿಯ ಮೇಲೆ ನೀರು ನಿಲ್ಲುವ ಘನ ತ್ಯಾಜ್ಯ ವಸ್ತುಗಳಾದ ಹಳೆಯ ಟೈರ್, ಒರಳುಕಲ್ಲು, ತೆಂಗಿನ ಚಿಪ್ಪು, ಒಡೆದ ಪ್ಲಾಸ್ಟಿಕ್ ಬಕೆಟ್‌ಗಳನ್ನು ಬಿಸಾಡದೆ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಲಾ ಆವರಣವನ್ನು “ಈಡಿಸ್ ಸೊಳ್ಳೆ ಉತ್ಪತ್ತಿ ರಹಿತ ಆವರಣ”ವನ್ನಾಗಿ ಮಾಡಲು ಹಾಗೂ ‘ಪ್ರತಿ ಶುಕ್ರವಾರ ಡೆಂಘೀ ನಿಯಂತ್ರಣ ಅಭಿಯಾನ’ದ ಭಾಗವಾಗಿ ಒಣ ದಿನ (ಡ್ರೈ ಡೇ) ಆಚರಿಸಲು ಕರೆ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಿದರು. ಈ ಜಾಗೃತಿ ಕಾರ್ಯಕ್ರಮದಲ್ಲಿ ಇಂಗಳದಾಳ್ ಗ್ರಾಮದ ಸರ್ವ ಸದಸ್ಯರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.




