ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿಲ್ಲ. ಸದ್ಯ ಡ್ಯಾಂನಲ್ಲಿ ಸಂಗ್ರಹವಾಗಿರುವ ಅಲ್ಪ ಪ್ರಮಾಣದ ನೀರನ್ನು ಕುಡಿಯಲು ಮಾತ್ರ ಬಳಸಲು ನೀರಾವರಿ ಇಲಾಖೆ ಸೂಚನೆ ನೀಡಿದೆ.
ಡ್ಯಾಂನಲ್ಲಿ ನೀರಿಲ್ಲದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಈ ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮನವಿ ಮಾಡಲಾಗಿದೆ.
ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುನಿರಾಬಾದ್‌ನ ಕನೀನಿನಿ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಗಾರು ಮಳೆ ಅಂದುಕೊಂಡಷ್ಟು ಪ್ರಮಾಣದಲ್ಲಿ ಆಗಿದ್ದರೆ ಇಷ್ಟೊತ್ತಿಗಾಗಲೇ ತುಂಗಭದ್ರಾ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದಷ್ಟು ನೀರು ಸಂಗ್ರಹ ಆಗಬೇಕಿತ್ತು. ಆದರೆ ಮಳೆ ನೀರು ಸಂಗ್ರವಾಗದ ಹಿನ್ನೆಲೆ ರೈತರು, ಜನ ಸಾಮಾನ್ಯರಿಗೆ ಭಾರಿ ಹೊಡೆತ ಬಿದ್ದಿದೆ.




