ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿ ನಡೆದಿದೆ.
ಹೊಸಪೇಟೆಯ ತುಂಗಭದ್ರಾ ಜಲಾಶಯ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ರಣಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಟ್ರಾಕ್ಟರ್ ಸೇತುವೆ ಮೇಲಿಂದ ಕೆಳಗೆ ಬಿದ್ದು ದುರ್ಘಟನೆ ಸಂಭವಿಸಿದೆ.
ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಜರುಗಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದ ತೀವ್ರತೆಗೆ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಟ್ರಾಕ್ಟರ್‌ನಲ್ಲಿದ್ದ ಇನ್ನುಳಿದ ಹಲವು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಹೆದ್ದಾರಿಯಲ್ಲಿ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಮುರುಳಿಧರ್ ಅವರು ಸಿಬ್ಬಂದಿಯೊಂದಿಗೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಅಪಘಾತದ ಸ್ಥಳದಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ತಕ್ಷಣವೇ ಹೊರತೆಗೆದಿದ್ದಾರೆ. ಆಂಬ್ಯುಲೆನ್ಸ್ ಮುಖಾಂತರ ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಅಪಘಾತದ ಕಾರಣ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.




