ದೆಹಲಿಯಲ್ಲಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ದೇಶದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಕೊಪ್ಪಳದ ಅಶೋಕ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪ್ರಗತಿಪರ ಚಿಂತಕ ಬಸವರಾಜ ಶೀಲವಂತರ್, “ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳ ಕುರಿತು ಸೋನಮ್ ವಾಂಗ್ಚುಕ್ ಶಾಂತಿಯುತವಾಗಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದೇ ಇರುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ವಿಷಯಗಳಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಬಾರದು. ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ಕಾಶಿಂ ನಾಗೇಶನಹಳ್ಳಿ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು. ಸೋನಮ್ ವಾಂಗ್ಚುಕ್ ಅವರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರ ಯಮನೂರಪ್ಪ ಈಳಿಗನೂರ್ ಮಾತನಾಡಿ, “ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟಗಳನ್ನು ನಿರ್ಲಕ್ಷಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಸಂವಾದ ಆರಂಭಿಸಿ, ಸೋನಮ್ ವಾಂಗ್ಚುಕ್ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ, ಎಸ್.ಎ.ಗಫಾರ್, ಡಿ.ಎಂ. ಬಡಿಗೇರ್, ಶಶಿಕಲಾ ಡಿ. ಮಠದ, ದಿಲಾಶಾದ್ ನದಾಫ್, ಗೌರಿ ಗೋನಾಳ, ನಿಂಗು ಬೆಣಕಲ್, ಕರಿಯಪ್ಪ ಮಣ್ಣಿನವರ, ಮುದುಕಪ್ಪ ಎಂ. ಹೊಸಮನಿ, ಶಿವಪ್ಪ ಹಡಪದ, ಮಕ್ಬೂಲ್ ಸಾಬ್, ಗವಿಸಿದ್ದಪ್ಪ ಹಲಗಿ, ಹೊನ್ನೂರು ಬೋಚನಹಳ್ಳಿ, ಲಕ್ಷ್ಮಣ ಮಂಡಲಗೇರಿ, ಮೈಲಪ್ಪ ಮಾದಿನೂರು, ಭರಮಜೀ ತಿಗರಿ, ಸಂಜುಮೂರ್ತಿ ಬೇವಿನಗಿಡ, ರಾಮಲಿಂಗ ಶಾಸ್ತ್ರಿ ಮಠ, ಕಾಶಪ್ಪ ಚಲವಾದಿ, ಹಾಗೂ ಶಿವರಾಜ್ ಚಲವಾದಿ, ಸೇರಿದಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





