ಕುಮಟಾ: ತಾಲೂಕಿನ ದೀವಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜಾನುವಾರುಗಳು ಮೃತಪಟ್ಟ ಘಟನೆ ನಡೆದಿದೆ. ಘಟನೆಯಿಂದ ಜಾನುವಾರುಗಳ ಮಾಲೀಕರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.
ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಲು ಬಿಡಲಾಗಿತ್ತು. ಈ ವೇಳೆ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಹೊಡೆತಕ್ಕೆ ಕೃಷ್ಣ ತುಳುಸು ಗೌಡ ಅವರಿಗೆ ಸೇರಿದ ಎರಡು ಆಕಳು, ಒಂದು ಕರು ಹಾಗೂ ಎರಡು ಗೂಳಿಗಳು ಮೃತಪಟ್ಟಿವೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ
ಗಂಗಾಧರ ಗೌಡ ಅವರಿಗೆ ಸೇರಿದ ಒಂದು ಆಕಳು ಕೂಡ ಮೃತಪಟ್ಟಿದ್ದು, ಒಟ್ಟು ಏಳು ಜಾನುವಾರುಗಳು ಸಿಡಿಲಿಗೆ ಬಲಿಯಾಗಿವೆ. ಬೆಳಿಗ್ಗೆ ಮೇಯಲು ಬಿಟ್ಟಿದ್ದ ಜಾನುವಾರುಗಳು ರಾತ್ರಿ ಕಳೆದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಮಾಲೀಕರು ಮರುದಿನ ಬೆಳಿಗ್ಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅರಣ್ಯ ಪ್ರದೇಶದಲ್ಲಿ ಏಳು ಜಾನುವಾರುಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪಶುವೈದ್ಯರು, ಸಿಡಿಲು ಬಡಿದ ಪರಿಣಾಮ ಜಾನುವಾರುಗಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಆರ್ಥಿಕ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.






