ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಧರಣಿ ನಡೆಸಿದರು.
ಅಭಿವೃದ್ದಿಪಡಿಸಿರುವ ಮೊಬೈಲ್ ಹಾಗೂ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡುವಂತೆ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಡಿ ಎಸ್ ಕುಲಕರ್ಣಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಒಂದುವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಸಾಮೂಹಿಕ ರಜೆ, ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಧರಣಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
