ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಒಳಗಾಗಿ 10 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರು ಮೂಲದ ಹರ್ಷಿತ್ (10) ಮೃತ ಬಾಲಕನಾಗಿದ್ದಾನೆ. ಕುಟುಂಬ ಸದಸ್ಯರೊಂದಿಗೆ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಆಗಮಿಸಿದ್ದ ಹರ್ಷಿತ್, ಭಾನುವಾರ ಬೆಳಿಗ್ಗೆ ನಾಗಮಲೆಗೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿ ಬಾಲಕನನ್ನು ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.
ಈ ವಿಶೇಷ ಸುದ್ದಿ ಓದಿದ್ದೀರಾ?ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….
ಘಟನೆಯಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಬಾಲಕನಿಗಾಗಿ ಹುಡುಕಾಟ ನಡೆಸಿದ್ದು, ಸುಮಾರು ಅರ್ಧ ಗಂಟೆಯ ಬಳಿಕ ಸಮೀಪದ ಅರಣ್ಯ ಪ್ರದೇಶದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಕತ್ತು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ಕೆ ವೆಂಕಟೇಶ್
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ವಾಚರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.




