- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 42 ಜನ ರೈತರ ಆತ್ಮಹತ್ಯೆ ಪ್ರಕರಣ
- ರೈತರು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಒತ್ತಾಯ
ರಾಜ್ಯದಲ್ಲಿ ರೈತರ ಪಂಪಸೆಟ್‌ಗಳಿಗೆ ಉಂಟಾಗಿರುವ ಅನಿಯಮಿತ ಲೋಡ್ ಶೆಡಿಂಗ್ ರದ್ದುಪಡಿಸಿ, ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸುವುದು ಸೇರಿದಂತೆ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲ ಸ್ಥಿತಿ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಆಗ್ರಹಿಸಿದೆ.
ರೈತಪರ ಯೋಜನೆಗಳನ್ನು ರದ್ದುಗೊಳಿಸಿದ್ದನ್ನು ವಿರೋಧಿಸಿ ಬೀದರ್‌ನಲ್ಲಿ ರೈತರೊಂದಿಗೆ ತಹಶೀಲ್ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
“ಸಕಾಲಕ್ಕೆ ಮಳೆಯಾಗದೆ ಬರಗಾಲದ ಸಮಸ್ಯೆ ಎದುರಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಪ್ರತಿ ವರ್ಷ ಸಂಗ್ರಹವಾಗಬೇಕಿದ್ದ ನೀರಿನ ಪ್ರಮಾಣವು ಕುಸಿತ ಕಂಡಿದ್ದು, ಇದರಿಂದಾಗಿ ರೈತರ ಜಮೀನುಗಳಿಗೆ ಸಮರ್ಪಕ ನೀರು ಪೂರೈಕೆಗೆ ಮುಂದಿನ ದಿನಗಳಲ್ಲಿ ತೊಂದರೆಯಾಗುವ ಆತಂಕ ಉಂಟಾಗಿದೆ. ಜೊತೆಗೆ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವದಿಂದ ರೈತರ ಪಂಪಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ ಪೂರೈಕೆ ಮಾಡಬೇಕಾಗಿತ್ತು. ಆದರೆ ಇತ್ತೀಚಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ಬರಗಾಲಕ್ಕೆ ತುತ್ತಾಗಿರುವ ರೈತರು ಈಗಾಗಲೇ ಪ್ರತಿಶತ 80% ರಷ್ಟು ಬೆಳೆಗಳನ್ನು ಬಿತ್ತನೆ ಮಾಡಿದ್ದರೂ ಅವುಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆ ಉಂಟಾಗಿ ರೈತ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.
“ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಹಲವಾರು ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ರೈತ ವಿದ್ಯಾನಿದಿ ಯೋಜನೆ, ಭೂ ಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಯೋಜನೆ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಯೋಜನೆಗಳನ್ನು ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 42 ಜನ ರೈತರ ಆತ್ಮಹತ್ಯೆ ಪ್ರಕರಣಗಳ ವರದಿಯಾಗಿರುವುದು ಅತ್ಯಂತ ಆತಂಕಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದರು.
“ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರ ತರುವ ಮೂಲಕ ತಕ್ಷಣ ರೈತರ ಸಹಾಯಕ್ಕೆ ಬರಬೇಕು. ರೈತರ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದ ಕೊಡದಿರುವ ರೀತಿಯಲ್ಲಿ ರೈತ ವರ್ಗಕ್ಕೆ ಧೈರ್ಯ ತುಂಬಬೇಕು. ರೈತರು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸರ್ಕಾರ ಈ ಬಗ್ಗೆ ಯುದ್ಧೋಪಾದಿಯಲ್ಲಿ ಕ್ರಮಕೈಗೊಂಡು ರೈತರ ನೆರವಿಗೆ ಧಾವಿಸಬೇಕೆಂದು” ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ; ಸೆ.16ರಿಂದ ರಾಜ್ಯ ಪ್ರವಾಸ ಘೋಷಿಸಿದ ಯಡಿಯೂರಪ್ಪ
ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಕುಶಾಲ್ ಪಾಟೀಲ್ ಗಾದಗಿ ಸೇರಿದಂತೆ ಪ್ರಮುಖರಾದ ಬಾಬು ವಾಲಿ, ಈಶ್ವರಸಿಂಗ್ ಠಾಕೂರ್, ಗುರುನಾಥ ಜಾಂತ್ಯೆಕರ್, ಚಂದ್ರಶೇಖರ ಪಾಟೀಲ, ಸುರೇಶ ಮಾಶೆಟ್ಟಿ, ಜಗನಾಥ ಪಾಟೀಲ್ ಸೇರಿದಂತೆ ಬೆಜೆಪಿ ಕಾರ್ಯಕರ್ತರಿದ್ದರು.