ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ ಪಾವಗಡ ತಾಲೂಕಿನ ಮಹಿಳೆಗೆ ಡಿವೈಎಸ್‌ಪಿ ರಾಮಚಂದ್ರಪ್ಪ ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದರು. ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಡಿವೈಎಸ್‌ಪಿ ಎಸಗಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರಪ್ಪ ಪರಾರಿಯಾಗಿದ್ದರು. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಡಿವೈಎಸ್‌ಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ, ಅವರನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಅಲ್ಲದೆ, ಆರೋಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಬಿಎನ್‌ಎಸ್ ಸೆಕ್ಸನ್ 68, 75, 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.