ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು.
ಈ ಪ್ರಕರಣದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿದ್ದು, ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಈ ಬಗ್ಗೆ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಮಲ್ಪೆ ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್ ಠಾಣೆಯ ಬೀಟ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ. ಈ ಬಗ್ಗೆ ಮೀನುಗಾರಿಕಾ ಬಂದರಿನಲ್ಲಿ ಸ್ವಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮಾ.22 ರಂದು ಬೆಳಗ್ಗೆ ಸಮಸ್ತ ಮೀನುಗಾರರಿಂದ ಪ್ರತಿಭಟನೆ ನಡೆಯಲಿದೆ. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಲಾಗುವುದು ಎಂದು ಮಲ್ಪೆ ಮೀನುಗಾರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.