ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್ ಕಾರ್ಖಾನೆಯ ಇಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್ ಪವಾರ್(47) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಮೇಶ ಪವಾರ್ ಅವರು ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ದಿವಂಗತ ವಾಲ್ಮೀಕಿ ನಾಯಕ್ ಅವರ ಅಳಿಯನಾಗಿದ್ದಾರೆ.
“ಅದಾನಿ ಗ್ರೂಪ್ ಮಾಲೀಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕಳೆದ 26 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ರಮೇಶ ಘಟಕದಲ್ಲಿ ಇಂಜಿನಿಯರ್ ಆಗಿದ್ದರು. ಕಾರ್ಖಾನೆಯಲ್ಲಿ ನಡೆಯುತ್ತಿರುವ ಅಕ್ರಮದ ಕುರಿತು ಸತ್ಯ ಹೇಳುವುದು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಕಾರಣಕ್ಕೆ ಕಾರ್ಖಾನೆ ಆಡಳಿತ ಮಂಡಳಿಯವರು ಕಿರುಕುಳ ನೀಡುತ್ತಿದ್ದರು, ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಮೂಲಗಳಿಂದ ತಿಳಿದು ಬಂದಿದೆ.
ಸ್ವಯಂ ನಿವೃತ್ತಿ ಘೋಷಿಸಬೇಕು, ಇಲ್ಲದಿದ್ದರೆ ಕೆಲಸದಿಂದ ತೆಗೆಯಲಾಗುವುದು ಎಂದು ಆಡಳಿತ ಮಂಡಳಿಯವರು ಒತ್ತಡ ಹಾಕಿದ್ದರು. ಇದರಿಂದ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿದ್ದು, ಸಾವಿಗೆ ಕಾರಣರಾದ ಕಾರ್ಖಾನೆಯ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ
ಈ ಬಗ್ಗೆ ವಾಡಿ ಪೊಲೀಸ್ ಠಾಣೆ ಪಿಎಸ್‌ಐ ಕೆ.ತಿರುಮಲೇಶ ಈದಿನ.ಕಾಮ್ ದೊಂದಿಗೆ ಮಾತನಾಡಿ, “ಎಸಿಸಿ ಸಿಮೆಂಟ್ ಕಾರ್ಖಾನೆ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು” ಎಂದು ಹೇಳಿದರು.