ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 2019ರಲ್ಲಿ ಕೃತ್ಯ ನಡೆದಿತ್ತು. ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕೃತ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ತನಿಖೆ ನಡೆಸಿ, ಜಾರ್ಜ್‌ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿರುವ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ದಿಲೀಪ್ ಕುಮಾರ್, ಅಪರಾಧಿಗೆ 20 ವರ್ಷ ಜೈಲು, 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನಿರ್ದೇಶಿಸಿದ್ದಾರೆ.