ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು, ಕೃಷಿ, ಆರೋಗ್ಯ, ಶಿಕ್ಷಣ, ರಸ್ತೆ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿಗೆ ವಿಶೇಷ ಆದ್ಯತೆ
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಶೇ.25ಕ್ಕಿಂತ ಕಡಿಮೆ ನೀರಿನ ಸಂಗ್ರಹವಿರುವ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ ಕೆರೆಗಳ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ದಿನಕ್ಕೆ ಎರಡು ಬಾರಿ ಪರಿಸ್ಥಿತಿಯ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಮದ್ದೂರು ಪಟ್ಟಣಕ್ಕೆ ಶಾಶ್ವತ ನೀರಿನ ವ್ಯವಸ್ಥೆ
ಮದ್ದೂರು ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಲಧಾರೆ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಸಿ, ಕಾವೇರಿ ನೀರನ್ನು ನೇರವಾಗಿ ಪಟ್ಟಣಕ್ಕೆ ಒದಗಿಸುವ ವ್ಯವಸ್ಥೆ ರೂಪಿಸಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು. ನೀರಿನ ಸೋರಿಕೆ ತಡೆದು ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದರು.
ಬಾಕಿ ಬೆಳೆ ಪರಿಹಾರ ತ್ವರಿತ ವಿತರಣೆ
ಜಿಲ್ಲೆಯಲ್ಲಿ ಬೆಳೆ ನಷ್ಟ ಅನುಭವಿಸಿರುವ ಬಾಕಿ 16 ಸಾವಿರ ಫಲಾನುಭವಿಗಳಿಗೆ ಬೆಳೆ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಲೈನ್ಗಳಿಂದ ಕಬ್ಬಿನ ಬೆಳೆ ಹಾನಿಗೊಳಗಾಗಿರುವ ಪ್ರಕರಣಗಳ ಕುರಿತು ತಾಲೂಕುವಾರು ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸುವ ಸಂಬಂಧ ಎರಡು ದಿನಗಳೊಳಗೆ ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ವರದಿ ಸಲ್ಲಿಸುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರವು ನಿವೇಶನ ರಹಿತರಿಗೆ 30X40 ಅಳತೆಯ ನಿವೇಶನಗಳನ್ನು ಒದಗಿಸುವ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಸಮೀಪ ಸರ್ಕಾರಿ ಜಮೀನುಗಳನ್ನು ಗುರುತಿಸಬೇಕು. ಅಗತ್ಯವಿದ್ದಲ್ಲಿ ಖಾಸಗಿ ಜಮೀನು ಖರೀದಿಸುವ ಮೂಲಕ ನಿವೇಶನ ಹಂಚಿಕೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಕಂದಾಯ ಇಲಾಖೆಯಲ್ಲಿ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಡಿಸೆಂಬರ್ ಒಳಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಜೂನ್ ಒಳಗೆ ಅಗತ್ಯ ನಿರಾಕ್ಷೇಪಣಾ ಪತ್ರಗಳನ್ನು (ಎನ್ಒಸಿ) ವಿತರಿಸಲು ಕ್ರಮ ವಹಿಸಬೇಕು. ನಿರ್ಮಿತಿ ಕೇಂದ್ರ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಲ್ಯಾಂಡ್ ಆರ್ಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
ಕೇಂದ್ರದ ಯೋಜನೆಗಳಿಗೆ ವೇಗ ನೀಡಲು ಕ್ರಮ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಗತ್ಯವಿರುವ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ನಿರ್ಮಾಣ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹಂತದಲ್ಲಿ ಬಾಕಿ ಇರುವ ಯೋಜನೆಗಳ ವಿವರಗಳನ್ನು ಸಿದ್ಧಪಡಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ನಿಡಘಟ್ಟ ಸಮೀಪ ಪ್ರವೇಶ-ನಿರ್ಗಮನ ಮಾರ್ಗಗಳ ನಿರ್ಮಾಣ ಹಾಗೂ ಕೆಆರ್ಎಸ್ ಪ್ರದೇಶದಲ್ಲಿ ಐಐಟಿ ಸ್ಥಾಪನೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಸಹಕಾರ ನೀಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.
ಬಿಡದಿ ಮಾದರಿಯಲ್ಲಿ ಮಂಡ್ಯ ನಗರದಲ್ಲಿ ಲಭ್ಯವಿರುವ 12 ಎಕರೆ ಪ್ರದೇಶದಲ್ಲಿ ವಾಣಿಜ್ಯ, ವಸತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಟೌನ್ಶಿಪ್ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಅನುಮೋದನೆ ಪಡೆಯಲು ಪ್ರಯತ್ನಿಸಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ಅವರಿಗೆ ಸಚಿವರು ಭರವಸೆ ನೀಡಿದರು.
ಆರೋಗ್ಯ ಕ್ಷೇತ್ರದ ಸುಧಾರಣೆಗೆ ಆದ್ಯತೆ
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಅಗತ್ಯ ವೈದ್ಯಕೀಯ ಉಪಕರಣಗಳ ವಿವರಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಈ ಕುರಿತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಂಡ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಹೊರರೋಗಿ ವಿಭಾಗದ ಸೇವೆ ಹಾಗೂ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಡಿಸೆಂಬರ್ನಲ್ಲಿ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈಗಾಗಲೇ 100 ಎಕರೆ ಸರ್ಕಾರಿ ಜಮೀನನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಭೆಗೆ ಮಾಹಿತಿ ನೀಡಿದರು. ಮಾರ್ಚ್ನಲ್ಲಿ ಡ್ರೋನ್ ಸಮೀಕ್ಷೆ ನಡೆಸಿ ಜಿಯೋ ಟ್ಯಾಗಿಂಗ್ ಮಾಡಲಾಗಿದ್ದು, ಎಆರ್ಎಐ ಸಂಸ್ಥೆಯೂ ಜಮೀನಿನ ಕುರಿತು ಪರಿಶೀಲನೆ ನಡೆಸಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ ಅವರು, ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಸಚಿವ ಸಂಪುಟದ ಅನುಮೋದನೆ ದೊರೆತ ಕೂಡಲೇ ಜಮೀನು ಮಂಜೂರು ಮಾಡಲು ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಸ್ಥಾಪನೆಯಾಗಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.
ಅರಣ್ಯ ಹಾಗೂ ಕಂದಾಯ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅಕ್ರಮ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಇಲಾಖೆಗಳ ನಡುವೆ ಉತ್ತಮ ಸಹಕಾರ ಹಾಗೂ ಸಮನ್ವಯ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ 336 ಕೋಟಿ ರೂ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು, ಆಶ್ರಮ ಶಾಲೆಗಳು ಹಾಗೂ ವಿವಿಧ ಸಹಾಯಧನ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ 336 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಿದೆ. ಈ ಅನುದಾನದಡಿ ಅಗತ್ಯ ಕಾಮಗಾರಿಗಳನ್ನು ಶೀಘ್ರವಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
‘ಸ್ಮಾರ್ಟ್ ಮಂಡ್ಯ’ ಯೋಜನೆಯ ನೀಲನಕ್ಷೆ ಅನಾವರಣ
ಸಭೆಯಲ್ಲಿ ಮಂಡ್ಯ ನಗರದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ರೂಪಿಸಿರುವ ‘ಸ್ಮಾರ್ಟ್ ಮಂಡ್ಯ’ ಯೋಜನೆಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ನಗರಸಭೆ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳನ್ನು ಸದ್ಬಳಕೆ ಮಾಡಿಕೊಂಡು ವಾಣಿಜ್ಯ ಸಂಕೀರ್ಣಗಳು, ಅಪಾರ್ಟ್ಮೆಂಟ್ಗಳು, ಮಾಲ್, ಕೆಫೆ, ಟಾಯ್ ಟ್ರೈನ್ ಹಾಗೂ ಹಂಪಿ ಮಾದರಿಯ ಥಿಯೇಟರ್ ನಿರ್ಮಿಸುವ ಯೋಜನೆಗಳನ್ನು ಪ್ರಸ್ತಾಪಿಸಲಾಯಿತು. ನಗರದ ಸೌಂದರ್ಯೀಕರಣ, ಆರ್ಥಿಕ ಚಟುವಟಿಕೆಗಳ ವೃದ್ಧಿ ಹಾಗೂ ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಮೈಸೂರು ದಸರಾ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಲಭಿಸಿದ್ದ ದ್ವಿತೀಯ ಸ್ಥಾನದ ಪ್ರಶಸ್ತಿ ಪತ್ರವನ್ನು ಸಚಿವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಹಸ್ತಾಂತರಿಸಿದರು.
ಸಭೆಯಲ್ಲಿ ಸಚಿವ ಪಿ. ನರೇಂದ್ರಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ, ಕದಲೂರು ಉದಯ್, ಎಚ್.ಟಿ. ಮಂಜು, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ವಿವೇಕಾನಂದ, ಮಧು ಜಿ. ಮಾದೇಗೌಡ, ಮೈಶುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.





