ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ ‘ನಿಮ್ಮ ಮನೆಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನವೆಂಬರ್ 7ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಶಾಲೆಗೆ ಪ್ರವೇಶ ಪಡೆದ ದಿನವಾಗಿದ್ದು, ಇಂತಹ ಮಹತ್ವದ ದಿನದಂದು ಅಂಬೇಡ್ಕರ್ ಭವನದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡುತ್ತಿರುವುದು ಹೆಮ್ಮೆ ಎಂದರು.
ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಯನ್ನೂ ದಾಖಲಿಸಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಲಾಗುವುದು. ರಾಜ್ಯ ಮಟ್ಟದ ಪ್ರಜಾಸೇವಾ ಇಲಾಖೆಯೂ ಅರ್ಜಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಿದೆ. ಅರ್ಜಿದಾರರ ಸಮಸ್ಯೆ ಬಗೆಹರಿದಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.
ರಾಜಕೀಯ ಪ್ರೇರಿತವಾಗಿ ಕೆಲವು ಸಮಸ್ಯೆಗಳನ್ನು ಜೀವಂತವಾಗಿಟ್ಟುಕೊಂಡು ಅಶಾಂತಿ ಸೃಷ್ಟಿಸುವ ಹಾಗೂ ಪ್ರಚಾರ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸರಿತಪ್ಪುಗಳನ್ನು ವಿಮರ್ಶೆ ಮಾಡಬೇಕು. ಸಾಧನೆ ಮಾತನಾಡಬೇಕೇ ಹೊರತು, ಮಾತನಾಡುವುದೇ ಸಾಧನೆಯಾಗಬಾರದು. ರಾಜಕೀಯವು ಸೇವಾ ಕ್ಷೇತ್ರವಾಗಿದ್ದು, ಅಭಿವೃದ್ಧಿಯ ಚಿಂತನೆಯೊಂದಿಗೆ ಕೆಲಸ ಮಾಡಬೇಕು. ಸಮಸ್ಯೆಗಳನ್ನು ಬಗೆಹರಿಸುವ ಬದಲು ಅವುಗಳನ್ನು ಮುಂದುವರಿಸುವುದು ಸಾರ್ವಜನಿಕರಿಗೆ ಮಾಡುವ ದ್ರೋಹವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಯಾವ ಇಲಾಖೆಗೆ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು. ತಾಲ್ಲೂಕು ಮಾತ್ರವಲ್ಲದೆ ಹೋಬಳಿ ಮತ್ತು ಪಂಚಾಯಿತಿ ಮಟ್ಟಕ್ಕೂ ತೆರಳಿ ಜನರ ಸಮಸ್ಯೆಗಳನ್ನು ಆಲಿಸಬೇಕು. ನಾವು ಸೇವಾ ಕ್ಷೇತ್ರಕ್ಕೆ ಬಂದಿದ್ದು, ಪ್ರಚಾರದ ಹಿಂದೆ ಹೋಗದೆ ಕೆಲಸದ ಮೂಲಕ ಜನರ ವಿಶ್ವಾಸ ಗಳಿಸಬೇಕು. ನಮ್ಮ ಕೆಲಸ ಸುಗಮವಾಗಿ ನಡೆದರೆ ಜನರೇ ಬೆಂಬಲಿಸುತ್ತಾರೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕೃಷಿ ಭೂಮಿಯ ಪ್ರಮಾಣ ಕಡಿಮೆಯಾಗುತ್ತಿದೆ. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ರೈತರ ಪ್ರಮಾಣವೂ ಸೀಮಿತವಾಗಿದೆ. ಜಿಲ್ಲೆಯಲ್ಲಿನ ಬಡತನವನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ. ಯುವಜನರಿಗೆ ಕೃಷಿಯನ್ನು ಉದ್ಯಮವಾಗಿ ಪರಿವರ್ತಿಸುವ ಅವಕಾಶ ಕಲ್ಪಿಸಬೇಕು. ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಯುವಕರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ನಿರುದ್ಯೋಗ ಸಮಸ್ಯೆ ನಿವಾರಿಸಿ ಯುವಜನರ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪೈಪೋಟಿ ಎದುರಾಗಲಿದ್ದು, ಗುಣಮಟ್ಟದ ಶಿಕ್ಷಣ ಒದಗಿಸುವುದು ಮುಖ್ಯವಾಗಿದೆ. ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿವೆ. ಸುಲಭ ಆದಾಯದ ನಿರೀಕ್ಷೆಯಲ್ಲಿ ಮನೆಯಲ್ಲಿ ಕೂರದೆ ಯುವಕರು ಹೊರಬಂದು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 58 ಪ್ರಜಾಸೇವಾ ಆಂದೋಲನ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆದಾಡಬಾರದು ಎಂಬ ಉದ್ದೇಶದಿಂದ ಅಧಿಕಾರಿಗಳೇ ಜನರ ಬಳಿಗೆ ತೆರಳಿ ಅಹವಾಲು ಆಲಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ವಿಶೇಷ ಬರಹ ಓದಿದ್ದೀರಾ? ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಮಂಡ್ಯ ಜಿಲ್ಲೆಯಲ್ಲಿ ಇದುವರೆಗೆ 2,500ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ. ಅರ್ಜಿಗಳ ವಿಲೇವಾರಿ ಕುರಿತು ಸಾರ್ವಜನಿಕರು ತಮ್ಮ ತೃಪ್ತಿ ಅಥವಾ ಅತೃಪ್ತಿಯನ್ನು ದಾಖಲಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅರ್ಜಿದಾರರ ಒಪ್ಪಿಗೆ ಪಡೆದ ನಂತರವೇ ಅರ್ಜಿಯನ್ನು ಮುಕ್ತಾಯಗೊಳಿಸಲಾಗುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ಅಹವಾಲುಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!
ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕರು ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಸಚಿವ ನರೇಂದ್ರಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅರ್ಜಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ನಿಗದಿತ ಅವಧಿಯೊಳಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮಳವಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಮೂರನೇ ವೃತ್ತ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳನ್ನು ಸಚಿವರು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರೇಖಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ, ತಾಲ್ಲೂಕು ಅಧ್ಯಕ್ಷ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ತಹಶೀಲ್ದಾರ್ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ. ಉಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಇದ್ದರು.





