ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಎಎಪಿ ಮಂಡ್ಯ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಈ ಕೃತ್ಯ ನಡೆದಿರುವುದನ್ನು ಪೊಲೀಸರು ಈಗಾಗಲೇ ಬಯಲು ಮಾಡಿದ್ದಾರೆ. ಇದಕ್ಕೂ ಮುನ್ನ ಶ್ರೀರಂಗಪಟ್ಟಣ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರೊಬ್ಬರು ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ನಡೆಸುತ್ತಿರುವುದರ ಬಗ್ಗೆ ಪ್ರಸ್ತಾಪಿಸಿದ್ದರು. ಸಭೆಯಲ್ಲಿ ಹಾಜರಿದ್ದ ಆರೋಗ್ಯಾಧಿಕಾರಿಗಳು ನಮಗೆ ಈ ಬಗ್ಗೆ ದೂರುಗಳು ಬಂದಿವೆ. ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದೇವೆಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು” ಎಂದು ಆರೋಪಿಸಿದರು.
“ಆರೋಗ್ಯಾಧಿಕಾರಿಗಳು ಅಂದೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ್ದರೆ ಇಷ್ಟೊಂದು ದೊಡ್ಡ ಮಟ್ಟದವರೆಗೆ ಹೋಗುತ್ತಿರಲಿಲ್ಲ. ಮಂಡ್ಯ ಪೊಲೀಸರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರೇ ಬೇಧಿಸಬೇಕಾಗಿಯಿತು. ಹಳೇ ಮೈಸೂರು ಪ್ರದೇಶ ಸೇರಿದಂತೆ ಇದು ಎಲ್ಲೆಲ್ಲಿ ವ್ಯಾಪಿಸಿದೆ ಎಂಬುದನ್ನು ನಿಖರವಾಗಿ ಪತ್ತೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಅಗತ್ಯತೆ ಇದೆ. ಸಿಬಿಐ ತನಿಖೆಯಿಂದ ಮಾತ್ರವೇ ಇದು ಸಾಧ್ಯ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂತರಾಜ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಆಗ್ರಹ
“ಹೆಣ್ಣುಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದೆ. ಈಗ ಯುವಕರಿಗೆ ಮದುವೆಯಾಗಲು ಹೆಣ್ಣು ಸಿಗದಂತಹ ವಾತಾವರಣ ನಿರ್ಮಾಣವಾಗಿದೆ. ಯುವಜನರು ಮಹದೇಶ್ವರ ಬೆಟ್ಟಕ್ಕೆ ಹರಕೆ ಹೊತ್ತು ಕಾಲ್ನಡಿಗೆಯಲ್ಲಿ ಹೋಗಿ ದೇವರ ಮೊರೆ ಹೋಗುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಇಂತಹ ಪ್ರಕರಣವನ್ನು ಕಟ್ಟುನಿಟ್ಟಾಗಿ ತಡೆಯಬೇಕು” ಎಂದು ಆಗ್ರಹಿಸಿದರು.
ಈ ವೇಳೆ ಮುಖಂಡರುಗಳಾದ ಸುರೇಶ್‌ಗೌಡ, ಶಿವಕುಮಾರ್, ಯೋಗೇಶ್ ಇದ್ದರು.