ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕೆರಗೋಡು ಪೊಲೀಸ್ ಠಾಣೆಗೆ ಕರೆದೊಯ್ದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಹೋರಾಟಗಾರರು, ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾದರು.
ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ಜಾರಿಗಾಗಿ ಕಳೆದ ಡಿಸೆಂಬರ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು. ನಂತರ ಜನವರಿ 26ರಂದು ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿತ್ತು. ಏಪ್ರಿಲ್ 11ರಿಂದ ಜೂನ್ 6ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಐತಿಹಾಸಿಕ 1,500 ಕಿ.ಮೀ. ಪಾದಯಾತ್ರೆ ನಡೆಸುವುದರ ಜತೆಗೆ, ಜೂನ್ 6ರಂದು ಸಾವಿರಾರು ಜನರ ಭಾಗವಹಿಸುವಿಕೆಯಲ್ಲಿ ಬೃಹತ್ ಪಂಜಿನ ಮೆರವಣಿಗೆಯನ್ನೂ ಆಯೋಜಿಸಲಾಗಿತ್ತು. ಇಷ್ಟೆಲ್ಲಾ ಹೋರಾಟಗಳನ್ನು ನಡೆಸಿದರೂ ಸರ್ಕಾರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣದಂತಹ ಗಂಭೀರ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ನಿರಂತರ ಹೋರಾಟ ನಡೆಸುತ್ತಿದ್ದರೂ ಸ್ಪಂದನೆ ದೊರೆಯದಿರುವುದು ದುಃಖದ ಸಂಗತಿಯಾಗಿದೆ. ಹೀಗಾಗಿ ಹೋರಾಟದ ಮುಂದುವರಿದ ಭಾಗವಾಗಿ ನವೆಂಬರ್ 28ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಸಂಘದ ಸಹಯೋಗದೊಂದಿಗೆ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮುಖಂಡರು ತಿಳಿಸಿದರು.

ರೈತ ಸಂಘದ ಮುಖಂಡ ಸಂತೋಷ್ ಗೌಡ ಮಾತನಾಡಿ, ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಯಾಗಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಪ್ರಸ್ತುತ ರಾಜಕಾರಣಿಗಳು, ಶ್ರೀಮಂತರು ಹಾಗೂ ಅಧಿಕಾರಿಗಳ ಮಕ್ಕಳಿಗೆ ದೊರೆಯುತ್ತಿರುವ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯಗಳು ಬಡ ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲೇ ಲಭ್ಯವಾಗಬೇಕು. ಶಿಕ್ಷಣದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯ ಇರಬಾರದು. ಎಲ್ಲ ಮಕ್ಕಳಿಗೂ ಸಮಾನ ಗುಣಮಟ್ಟದ ಶಿಕ್ಷಣ ದೊರೆಯುವಂತಹ ವ್ಯವಸ್ಥೆಯನ್ನು ಸರ್ಕಾರ ರೂಪಿಸಬೇಕು ಎಂದು ಒತ್ತಾಯಿಸಿದರು.
ಈ ವಿಶೇಷ ವರದಿ ಓದಿದ್ದೀರಾ? ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?
ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಮತ್ತೊಮ್ಮೆ ಹೋರಾಟದ ತೀವ್ರತೆಯನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಯಿತು ಎಂದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ರಾಮಲಿಂಗೇಗೌಡ, ಕೀಳಘಟ್ಟ ನಂಜುಂಡಯ್ಯ, ಅಣ್ಣೂರು ಮಹೇಂದ್ರ, ಬನ್ನೂರು ನಾರಾಯಣ್, ಧನುಷ್ ಗೌಡ, ತೇಜಸ್ ಸೇರಿದಂತೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.





