ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಅಕ್ಟೋಬರ್ 23ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.
ಕಬ್ಬಿಗೆ ಟನ್‌ಗೆ ₹5,500 ನ್ಯಾಯಯುತ ಬೆಲೆ ನಿಗದಿಪಡಿಸುವುದು, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು, ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಪ್ರತಿಯೊಂದು ರೂಪಾಯಿಯನ್ನು ತಕ್ಷಣವೇ ರೈತರ ಖಾತೆಗೆ ಜಮೆ ಮಾಡಬೇಕು ಹಾಗೂ ಹಾಲಿನ ಖರೀದಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ದೊರಕಿಸಿಕೊಡುವುದು, ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ನಿಗದಿಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವುದು, ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸುವುದು ಹಾಗೂ ಎಫ್‌ಆರ್‌ಪಿ ಲೆಕ್ಕಾಚಾರದಲ್ಲಿ ಪರಿಗಣಿಸುವ ಕಬ್ಬಿನ ರಿಕವರಿ ಪ್ರಮಾಣವನ್ನು ಕಡಿಮೆ ಮಾಡುವುದು ಪ್ರತಿಭಟನೆಯ ಪ್ರಮುಖ ಬೇಡಿಕೆಗಳಾಗಿವೆ.
ಕಬ್ಬು ಬೆಳೆಗಾರರು ಎದುರಿಸುತ್ತಿರುವ ಬೆಲೆ ನಿಗದಿ ಸಮಸ್ಯೆಗಳು ಹಾಗೂ ಕೃಷಿ ಸಾಲದ ಹೊರೆ ಸೇರಿದಂತೆ ರೈತರ ಸಂಕಷ್ಟಗಳ ಬಗ್ಗೆ ಸರ್ಕಾರಗಳ ಗಮನ ಸೆಳೆಯಲು ಗಣಂಗೂರು ಟೋಲ್ ಬಂದ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಅಕ್ಟೋಬರ್ 23ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗಣಂಗೂರು ಟೋಲ್ ಬಳಿ ನಡೆಯಲಿರುವ ಪ್ರತಿಭಟನೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಹಳೆ ಮೈಸೂರು ಭಾಗದ ಸಮಸ್ತ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದ್ದಾರೆ.
ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಲು ರೈತರು ಒಗ್ಗಟ್ಟಿನಿಂದ ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಲಾಗಿದೆ.
ಈ ವಿಶೇಷ ವರದಿ ಓದಿದ್ದೀರಾ? ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಇನ್ನಿತರರು ಇದ್ದರು.






