ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗವನ್ನು ಖಂಡಿಸಿ, ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ, ಅಖಿಲ ಭಾರತ ವಕೀಲರ ಒಕ್ಕೂಟ ಹಾಗೂ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ನೇತೃತ್ವದಲ್ಲಿ ಮಂಗಳವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಕೀಲ ಬಿ.ಟಿ. ವಿಶ್ವನಾಥ್, ಯಾವುದೇ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದರೆ ಚುನಾವಣೆಗಳು ಹಾಗೂ ಸಾಂಸ್ಥಿಕ ವ್ಯವಸ್ಥೆಗಳಷ್ಟೇ ಅಲ್ಲ, ಜನರ ಸಕ್ರಿಯ ಭಾಗವಹಿಸುವಿಕೆಯೂ ಅಗತ್ಯವಾಗಿದೆ. ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಹತ್ತಿಕ್ಕುವುದು ಖಂಡನೀಯ ಎಂದರು.
NEET ಪರೀಕ್ಷೆ ನಡೆಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆಳವಣಿಗೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದೂ ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ಸಿದ್ದರಾಜು ಮಾತನಾಡಿ, ಕೇಂದ್ರ ಸರ್ಕಾರ ಜನರ ಹಿತಾಸಕ್ತಿಗಿಂತ ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು. NEET ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ ಸಂಗತಿ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ ಮಾತನಾಡಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಬದಲಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಬಂಧಿಸಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಅಮಾನವೀಯ ಮತ್ತು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆರೋಪಿಸಿದರು.
ಈ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?
ಪ್ರಮುಖ ಬೇಡಿಕೆಗಳು
- ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಬಳಕೆಗೆ ಆದೇಶ ನೀಡಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು.
- ಬಡ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ NEET ಪರೀಕ್ಷಾ ಪದ್ಧತಿಯನ್ನು ರದ್ದುಗೊಳಿಸಬೇಕು.
- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಸೋನಮ್ ವಾಂಗ್‌ಚುಕ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು.
- ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು.
ಪ್ರತಿಭಟನೆಯಲ್ಲಿ ವಕೀಲರಾದ ಕಿಶೋರ್, ಅರ್ಜುನ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ, ಚೇತನ್ ಕುಮಾರ್, ಲಕ್ಷ್ಮಿ, ಆಕಾಶ್, ಸುಚಿತ್, ವಿನಯ್, ಕಾರ್ತಿಕ್, ಚಂದ್ರಶೇಖರ್ ಜಿ., ಕರ್ನಾಟಕ ಜನಶಕ್ತಿಯ ಶಿವಣ್ಣ, ನಿಂಗಮ್ಮ, ಕುಮಾರ, ಕಂದನ್, ಮಣಿ ಸೇರಿದಂತೆ ಹಲವು ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಇದ್ದರು.






