ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲೆಯಲ್ಲಿ ಸಿದ್ಧತೆ ಕೈಗೊಳ್ಳಲಾಗಿದ್ದು, 2027ರ ಜನವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“2027ರ ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ನವೆಂಬರ್ 23ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವುದು, ಅರ್ಹ ಹೊಸ ಮತದಾರರನ್ನು ಸೇರ್ಪಡೆಗೊಳಿಸುವುದು ಹಾಗೂ ಮೃತಪಟ್ಟ ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ನಿಯಮಾನುಸಾರ ಪಟ್ಟಿಯಿಂದ ತೆಗೆದುಹಾಕುವುದು ಈ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ” ಎಂದು ತಿಳಿಸಿದರು.
“ನಿಗದಿತ ವೇಳಾಪಟ್ಟಿಯಂತೆ ಡಿಸೆಂಬರ್ 1ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 1ರಿಂದ 31ರವರೆಗೆ ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಈ ಅವಧಿಯಲ್ಲಿ ಸ್ವೀಕೃತವಾಗುವ ಅರ್ಜಿಗಳು ಹಾಗೂ ಆಕ್ಷೇಪಣೆಗಳನ್ನು 2027ರ ಜನವರಿ 14ರೊಳಗೆ ವಿಲೇವಾರಿ ಮಾಡಿ, ಜನವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು” ಎಂದು ಹೇಳಿದರು.
2027ರ ಜನವರಿ 01 ರಂದು 18 ವರ್ಷ ಪೂರ್ಣಗೊಳ್ಳುವ ಅರ್ಹ ಯುವಕ-ಯುವತಿಯರು ನಮೂನೆ-6ರ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದು. ಅಲ್ಲದೆ, 2027ರ ಏಪ್ರಿಲ್ 01, ಜುಲೈ 01 ಹಾಗೂ ಅಕ್ಟೋಬರ್ 01ರಂದು 18 ವರ್ಷ ಪೂರ್ಣಗೊಳಿಸಲಿರುವ ಯುವಜನರೂ ಮುಂಚಿತವಾಗಿ ನಮೂನೆ-6ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
“ಯುವ ಮತದಾರರು ಸ್ವಯಂಪ್ರೇರಣೆಯಿಂದ ನೋಂದಣಿ ಮಾಡಿಕೊಳ್ಳುವಂತೆ ರಾಜಕೀಯ ಪಕ್ಷಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವ್ಯಾಪಕ ಅರಿವು ಮೂಡಿಸಬೇಕು. ಅರ್ಹ ಮತದಾರರು ಯಾರೂ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.
“ಮತದಾರರ ಪಟ್ಟಿಯಲ್ಲಿನ ಹೆಸರು, ಸಂಬಂಧಿಕರ ಹೆಸರು, ವಿಳಾಸ ಹಾಗೂ ಭಾವಚಿತ್ರದಲ್ಲಿನ ತಿದ್ದುಪಡಿಗಳು ಅಥವಾ ವಾಸಸ್ಥಳ ಬದಲಾವಣೆಯ ವಿವರಗಳನ್ನು ದಾಖಲಿಸಲು ನಮೂನೆ-8ರ ಮೂಲಕ ಅರ್ಜಿ ಸಲ್ಲಿಸಬೇಕು. ಮೃತಪಟ್ಟ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಸೂಕ್ತ ದಾಖಲೆಗಳೊಂದಿಗೆ ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ” ಎಂದು ತಿಳಿಸಿದರು.
2026ರ ನವೆಂಬರ್ 17ರ ಅಂಕಿ-ಅಂಶಗಳ ಪ್ರಕಾರ ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 14,32,186 ಮತದಾರರಿದ್ದು, 1,889 ಮತಗಟ್ಟೆಗಳಿವೆ. ಭಾರತ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ಪುನರ್ವಿಂಗಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಮಳವಳ್ಳಿ ತಾಲೂಕಿನಲ್ಲಿ 3, ಮದ್ದೂರು, ಮೇಲುಕೋಟೆ, ನಾಗಮಂಗಲ ಹಾಗೂ ಕೆ.ಆರ್. ಪೇಟೆ ತಾಲೂಕುಗಳಲ್ಲಿ ಒಂದು ಹೊಸ ಮತಗಟ್ಟೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 7 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಮತಗಟ್ಟೆಗಳ ಕಟ್ಟಡ ಬದಲಾವಣೆ, ವಿಳಾಸ ಪರಿಷ್ಕರಣೆ ಹಾಗೂ ಹೊಸ ಮತಗಟ್ಟೆಗಳ ಸ್ಥಾಪನೆ ಕುರಿತು ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ವರದಿ ಪಡೆಯಲಾಗಿದೆ. ವರದಿಯ ಆಧಾರದ ಮೇಲೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಲು ಕ್ರಮ ವಹಿಸಲಾಗುವುದು ಎಂದರು.
ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ), ಮತದಾರರ ನೋಂದಣಾಧಿಕಾರಿಗಳ ಕಚೇರಿ ಅಥವಾ https://voters.eci.gov.in ವೆಬ್‌ಸೈಟ್ ಹಾಗೂ ECINET ಮೊಬೈಲ್ ಅಪ್ಲಿಕೇಶನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿದ್ದಲ್ಲಿ ಅಥವಾ ವಿವರಗಳಲ್ಲಿ ಲೋಪದೋಷಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಬೇಕು. ಮೃತಪಟ್ಟ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಕುರಿತು ಸೂಕ್ತ ದಾಖಲೆಗಳೊಂದಿಗೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ. ಆರ್. ರೂಪ,ಜಿಲ್ಲಾ ಅಧಿಕಾರಿಗಳ ಕಛೇರಿಯ ತಹಸೀಲ್ದಾರ್ ರವಿಶಂಕರ್ ಹಾಗೂ ವಿವಿಧ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.




